ADVERTISEMENT

ಫಡ್ನವೀಸ್‌ ಸರ್ಕಾರದಲ್ಲಿ ಸೇನಾ ಸೇರ್ಪಡೆ ಸದ್ಯಕ್ಕಿಲ್ಲ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2014, 19:30 IST
Last Updated 29 ಅಕ್ಟೋಬರ್ 2014, 19:30 IST

ಮುಂಬೈ (ಪಿಟಿಐ): ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್‌ ಅವರ ನಿಯೋಜನೆಯ ಮರು ದಿನವೇ ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಪಕ್ಷದ ಮುಂದಿನ ನಡೆ ಏನು ಎಂಬ ಬಗ್ಗೆ ತೀವ್ರ ಚರ್ಚೆ ನಡೆದಿದೆ. ಆದರೆ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಶಿವಸೇನಾ ಸೇರುವ ಸಾಧ್ಯತೆ ಸದ್ಯಕ್ಕಂತೂ ಇಲ್ಲ.

ಶಿವಸೇನಾ ಜತೆ ಯಾವುದೇ ಮಾತುಕತೆ ನಡೆಯುತ್ತಿಲ್ಲ. ಶುಕ್ರವಾರ ಸರ್ಕಾರ ಅಧಿಕಾರಕ್ಕೆ ಬಂದ ನಂತರವೇ ಮಾತುಕತೆ ಆರಂಭವಾಗಲಿದೆ ಎಂದು ಬಿಜೆಪಿಯ ಹಿರಿಯ ಮುಖಂಡರು ಹೇಳಿದ್ದಾರೆ. ಫಡ್ನವೀಸ್‌ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಎರಡೂ ಪಕ್ಷಗಳು ಮೃದು ಧೋರಣೆ ತಳೆದಿವೆ.

‘ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಬಿಜೆಪಿ ನೇತೃತ್ವದ ಸರ್ಕಾರ ಸೇರುವ ಬಗ್ಗೆ ಉದ್ಧವ್‌ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಸೇನಾ ವಕ್ತಾರ ನೀಲಮ್‌ ಗೋರೆ ತಿಳಿಸಿದ್ದಾರೆ. ಯಾವುದೇ ಷರತ್ತು ಇಲ್ಲದೆ ಶಿವಸೇನಾ ಸರ್ಕಾರ ಸೇರಬೇಕು ಎಂಬುದು ಬಿಜೆಪಿ ನಾಯಕರ ಒತ್ತಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.