ADVERTISEMENT

ಭೂಸ್ವಾಧೀನ ಮಸೂದೆಗೆ ಸದನದಲ್ಲಿ ತೀವ್ರ ವಿರೋಧ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2015, 10:04 IST
Last Updated 20 ಏಪ್ರಿಲ್ 2015, 10:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ(ಪಿಟಿಐ): ಭೂಸ್ವಾಧೀನ ತಿದ್ದುಪಡಿ ಮಸೂದೆಗೆ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಚರ್ಚೆ ವೇಳೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿ ಕೋಲಾಹಲ ಸೃಷ್ಟಿಯಾಯಿತು.

ಸದನದಲ್ಲಿ ಗದ್ದಲ ಎಬ್ಬಿಸಿದ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಎಡ ಪಕ್ಷಗಳಾದ ಟಿಎಂಸಿ, ಎಸ್ಪಿ, ಆರ್ ಜೆಡಿ ಸದಸ್ಯರು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ರಾಜೀವ್ ಪ್ರತಾಪ್ ರೂಡಿ ಅವರತ್ತ ನುಗ್ಗಿ ಅಸಮಾಧಾನ ವ್ಯಕ್ತಪಡಿಸಿದರು.

‘ಮಸೂದೆ ಹಿಂದಕ್ಕೆ ಪಡೆಯಬೇಕು’. ‘ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ’. ‘ರೈತ ವಿರೋಧಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು’ ಎಂದು ಘೋಷಣೆ ಕೂಗಿದರು.

ಪ್ರಮುಖರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಆರ್ ಜೆಡಿ ಮುಖಂಡ ಮುಲಾಯಂ ಸಿಂಗ್ ಯಾದವ್, ಜೆಡಿಯುನ ಧರ್ಮೇಂದ್ರ ಯಾದವ್ ಸೇರಿದಂತೆ ವಿರೋಧ ಪಕ್ಷದ ಮುಖಂಡರು ಸದನದಲ್ಲಿ ಉಪಸ್ಥಿತರಿದ್ದರು.

ಕಾಂಗ್ರೆಸ್ ನ ಜ್ಯೋತಿರಾದಿತ್ಯ ಸಿಂಧಿಯಾ, ಕೆ.ಸಿ. ವೇಣುಗೋಪಾಲ್ ಮತ್ತು ಗೌರವ್ ಗೊಗೊಯ್, ಆರ್ ಜೆಡಿಯ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್, ಜೆಡಿಯುನ ಧರ್ಮೇಂದ್ರ ಯಾದವ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದರು. ಆದರೆ, ವಿರೋಧ ಪಕ್ಷಗಳ ಸದಸ್ಯರು ಗದ್ದಲ ಮುಂದುವರಿಸಿದರು. ಈ ವೇಳೆ ಸ್ಪೀಕರ್ ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಸೈನಾ ನೆಹ್ವಾಲ್ ಹಾಗೂ ಸಾನಿಯಾ ಸಾಧನೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ ಎಂದು ಸದನದ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸಿದರು.

ಇದೇ ವೇಳೆ ಸಚಿವೆ ಸುಷ್ಮಾ ಸ್ವರಾಜ್ ಮಾತನಾಡಿ, ಯೆಮನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆ ತಂದಿರುವ ಬಗ್ಗೆ ಪ್ರಸ್ತಾಪಿಸಿದರು. ಆದರೆ, ವಿರೋಧ ಪಕ್ಷಗಳ ಸದಸ್ಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮುಂದುವರಿಸಿದರು. ಹೀಗಾಗಿ, ಸಭಾಧ್ಯಕ್ಷರು ಸದನದ ಕಲಾಪದನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.