ADVERTISEMENT

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2014, 12:42 IST
Last Updated 28 ಸೆಪ್ಟೆಂಬರ್ 2014, 12:42 IST

ನವದೆಹಲಿ (ಪಿಟಿಐ): ಅಕ್ಟೋಬರ್‌ 15ರಂದು ಚುನಾವಣೆ ಎದುರಿಸಲಿರುವ ಮಹಾರಾಷ್ಟ್ರದಲ್ಲಿ ಭಾನುವಾರ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

15 ವರ್ಷಗಳ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಪಕ್ಷದ ಮೈತ್ರಿ ಮುರಿದು ಬಿದ್ದ ಬಳಿಕ ಎನ್‌ಸಿಪಿ ಕಾಂಗ್ರೆಸ್‌ಗೆ ನೀಡಿದ್ದ ಬೆಂಬಲ ಹಿಂಪಡೆದಿದ್ದರು. ಪರಿಣಾಮ ಪೃಥ್ವಿರಾಜ್‌ ಚೌಹಾಣ್‌ ಅವರ ನೇತೃತ್ವದ ಸರ್ಕಾರ ಬಹುಮತದಿಂದ ಅಲ್ಪಮತಕ್ಕೆ ಕುಸಿದಿತ್ತು.

ಕೇಂದ್ರ ಸಚಿವ ಸಂಪುಟ ಶಿಫಾರಸು ಮಾಡಿದ ಒಂದು ದಿನದ ಬಳಿಕ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪ್ರಸ್ತಾವಕ್ಕೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು  ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರ ಅನುಪಸ್ಥಿತಿಯಲ್ಲಿ ಗೃಹಸಚಿವ ರಾಜನಾಥ್ ಸಿಂಗ್ ಅವರು ನಡೆಸಿದ  ಸಂಪುಟದ ‘ತುರ್ತು’ ಸಭೆಯಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಶಿಫಾರಸು ಮಾಡಿದ್ದರು.

ಕಾಂಗ್ರೆಸ್‌ಗೆ ನೀಡಿದ್ದ ಬೆಂಬಲವನ್ನು  ಎನ್‌ಸಿಪಿ ಹಿಂಪಡೆದ ಬೆನ್ನಲ್ಲೆ, ಮುಖ್ಯಮಂತ್ರಿ ಹುದ್ದೆಗೆ ಚೌಹಾಣ್ ಅವರು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಅಂಗೀಕರಿಸಿದ್ದ ರಾಜ್ಯಪಾಲರಾದ ಸಿ.ಎಚ್‌.ವಿದ್ಯಾಸಾಗರ ರಾವ್‌ ಅವರು ಮಹರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.

ರಾಷ್ಟ್ರಪತಿ ಆಳ್ವಿಕೆ ಹೇರುವ ಕೇಂದ್ರ ನಿರ್ಧಾರಕ್ಕೆ ಪ್ರತಿಪಕ್ಷ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.