ADVERTISEMENT

ರಾಮ ಜನ್ಮಭೂಮಿ–ಬಾಬರಿ ಮಸೀದಿ ವಿವಾದ: ಶೀಘ್ರ ವಿಚಾರಣೆ ಆರಂಭಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್‌

ಏಜೆನ್ಸೀಸ್
Published 21 ಜುಲೈ 2017, 14:45 IST
Last Updated 21 ಜುಲೈ 2017, 14:45 IST
ರಾಮ ಜನ್ಮಭೂಮಿ–ಬಾಬರಿ ಮಸೀದಿ ವಿವಾದ: ಶೀಘ್ರ ವಿಚಾರಣೆ ಆರಂಭಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್‌
ರಾಮ ಜನ್ಮಭೂಮಿ–ಬಾಬರಿ ಮಸೀದಿ ವಿವಾದ: ಶೀಘ್ರ ವಿಚಾರಣೆ ಆರಂಭಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್‌   

ನವದೆಹಲಿ: ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಅವರು ಸಲ್ಲಿಸಿದ್ದ ಮೇಲ್ಮನವಿಗೆ ಪ್ರತಿಕ್ರಿಯಿಸಿರುವ ಸುಪ್ರೀಂಕೊರ್ಟ್‌, ‘ವಿವಾದದ ಕುರಿತು ಶೀಘ್ರ ವಿಚಾರಣೆ ಆರಂಭಿಸಲಾಗುವುದು’ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಜೆ.ಎಸ್‌.ಖೇಹರ್‌ ಹಾಗೂ ಡಿ.ವೈ.ಚಂದ್ರಚೂಡ್‌ ಅವರಿದ್ದ ಪೀಠ, ‘ಕೂಡಲೇ ವಿವಾದದ ಪ್ರಮುಖ ಅಂಶಗಳನ್ನು ಪಟ್ಟಿಮಾಡಿ, ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ತಿಳಿಸಿದೆ.

ಮೊಘಲರ ಕಾಲದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾಗಿದ್ದ ಬಾಬರಿ ಮಸೀದಿಯನ್ನು 1992ರ ಡಿಸೆಂಬರ್‌ 6ರಂದು ವಿಶ್ವ ಹಿಂದೂ ಪರಿಷತ್‌ ಸಂಘಟನೆಯ ಕಾರ್ಯಕರ್ತರು ಧ್ವಂಸಗೊಳಿಸಿದ್ದರು. ಆ ಬಳಿಕ ಹಿಂದೂ–ಮುಸ್ಲಿಂ ಕೋಮು ಗಲಭೆ ಆರಂಭವಾಗಿ ಮೂರು ಸಾವಿರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದರು.

ADVERTISEMENT

ಈ ಸಂಬಂಧ ವಿಚಾರಣೆ ನಡೆಸಿದ್ದ ಲಖನೌ ಹೈಕೋರ್ಟ್‌ 2010ರಲ್ಲಿ ವಿವಾದಿತ ಭೂ ಪ್ರದೇಶವನ್ನು ಹಿಂದೂ ಹಾಗೂ ಮುಸ್ಲಿಂರಿಗೆ ಸಮನಾಗಿ ಹಂಚಿಕೆ ಮಾಡಿ ತೀರ್ಪು ನೀಡಿತ್ತು. ಆ ಬಳಿಕ ವಿಚಾರಣೆ ಮುಂದುವರಿದಿರಲಿಲ್ಲ.

ಆದರೆ 2017ರ ಮಾರ್ಚ್‌ನಲ್ಲಿ ಸುಪ್ರೀಂಕೊರ್ಟ್‌ ಮುಖ್ಯ ನ್ಯಾಯಮೂರ್ತಿ ಖೇಹರ್‌ ಅವರು, ‘ಪ್ರಕರಣ ಜನರ ಧಾರ್ಮಿಕ ಹಾಗೂ ಭಾವನಾತ್ಮಕ ಅಂಶಗಳಿಗೆ ಸಂಬಂಧಿಸಿದ್ದಾಗಿರುವುದರಿಂದ, ಸಂಬಂಧಿಸಿದ ಎಲ್ಲ ವ್ಯಕ್ತಿಗಳು ನ್ಯಾಯಾಲಯದ ಹೊರಗೆ ಸಭೆ ಸೇರಿ ವಿವಾದವನ್ನು ಸರಿ ಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದರು. ಆದರೂ ಯಾವುದೇ ಬದಲಾವಣೆಗಳಾಗಿರಲಿಲ್ಲ.

ಹಾಗಾಗಿ, ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥ ಪಡಿಸಬೇಕು ಎಂದು ಕೋರಿ ಸುಬ್ರಮಣಿಯನ್‌ ಸ್ವಾಮಿ ಅವರು ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.