ADVERTISEMENT

ಅಪಾಯಕಾರಿ ಮನಸ್ಥಿತಿಯ ಬಿಜೆಪಿ

ಕಾಂಗ್ರೆಸ್‌ ಮುಖಂಡ ಪ್ರೊ.ಬಿ.ಕೆ.ಚಂದ್ರಶೇಖರ್‌ ಆರೋಪ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 19:30 IST
Last Updated 17 ಮಾರ್ಚ್ 2018, 19:30 IST

ಮೈಸೂರು: ಗೂಂಡಾಗಿರಿ ಮಟ್ಟಹಾಕಲು ಉತ್ತರಪ್ರದೇಶದ ಎನ್‌ಕೌಂಟರ್‌ ಮಾದರಿ ಅನುಸರಿಸಲಾಗುವುದು ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಯನ್ನು ವಿರೋಧಿಸಿದ ಕಾಂಗ್ರೆಸ್‌ ಮುಖಂಡ ಪ್ರೊ.ಬಿ.ಕೆ.ಚಂದ್ರಶೇಖರ್‌, ‘ಇದು ತೀರಾ ಅಪಾಯಕಾರಿ ಮನಸ್ಥಿತಿ’ ಎಂದು ಕಳವಳ ವ್ಯಕ್ತಪಡಿಸಿದರು.

‘ಪ್ರಜಾವಾಣಿ ಸಂವಾದ’ದಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡುವಾಗ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದರು.

‘ಎನ್‌ಕೌಂಟರ್ ಮೂಲಕ ಅಪರಾಧ ಕೃತ್ಯಗಳನ್ನು ನಿಯಂತ್ರಿಸುತ್ತೇವೆ ಎಂಬುದು ಭ್ರಮೆ. ಅಪರಾಧ ಸಾಬೀತಾಗುವ ಮುನ್ನವೆ ಗುಂಡಿಟ್ಟು ಹತ್ಯೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಉತ್ತರಪ್ರದೇಶದ ಬಿಜೆಪಿ ಸರ್ಕಾರ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿದೆ. ಇದು ಪ್ರಜಾಪ್ರಭುತ್ವ ಆಶಯಗಳಿಗೆ ವಿರುದ್ಧವಾಗಿದ್ದು, ನ್ಯಾಯಾಂಗ ವ್ಯವಸ್ಥೆಯನ್ನು ಅಣಕಿಸುತ್ತಿದೆ’ ಎಂದು ಚಂದ್ರಶೇಖರ್ ಆಕ್ರೋಶ ಹೊರಹಾಕಿದರು.

ADVERTISEMENT

‘ಬಿಜೆಪಿ ಸರ್ಕಾರ ಆಡಳಿತದಲ್ಲಿರುವ ರಾಜಸ್ತಾನ, ಉತ್ತರಪ್ರದೇಶದಲ್ಲಿ ನಿತ್ಯ ಸರಾಸರಿ ನಾಲ್ಕು ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಲಖನೌ ಸಮೀಪ ದಲಿತ ಮಹಿಳೆಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಇಂತಹ ಕೃತ್ಯಗಳನ್ನು ತಡೆಯಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಏಕೆ ಸಾಧ್ಯವಾಗಿಲ್ಲ’ ಎಂದು ಪ್ರಶ್ನಿಸಿದರು.

**

ಉದ್ಯಮಿ ನೀರವ್‌ ಮೋದಿ, ಮೆಹುಲ್‌ ಚೋಕ್ಸಿ ಬಿಜೆಪಿಯ ಎಟಿಎಂ. ವಿದೇಶ ಸೇರಿದ ಬಳಿಕವೂ ಹಣ ಪೂರೈಕೆ ಮಾಡುತ್ತಿದ್ದಾರೆ
– ಪ್ರೊ.ಬಿ.ಕೆ.ಚಂದ್ರಶೇಖರ್‌, ಕಾಂಗ್ರೆಸ್‌ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.