ADVERTISEMENT

ಅವಕಾಶ ಕಲ್ಪಿಸದ ಕೆಇಎ ಪೋಷಕರ ಆರೋಪ

ಕೃಷಿ ಕೋರ್ಸ್‌ ಸೀಟು ಆಯ್ಕೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2015, 19:32 IST
Last Updated 3 ಸೆಪ್ಟೆಂಬರ್ 2015, 19:32 IST

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಕೃಷಿಗೆ ಸಂಬಂಧಿಸಿದ ಇತರ ಕೋರ್ಸ್‌ಗಳ ಪ್ರವೇಶಕ್ಕೆ ಸೀಟು ಆಯ್ಕೆ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅವಕಾಶ ಕಲ್ಪಿಸಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) 2ನೇ ಸುತ್ತಿನ ಮುಂದುವರಿದ ಸೀಟು ಹಂಚಿಕೆ ಪ್ರಕ್ರಿಯೆಯ ಭಾಗವಾಗಿ ಪ್ರಾಧಿಕಾರವು ಗುರುವಾರ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಿದೆ. ಒಟ್ಟು 217 ಸೀಟುಗಳು ಲಭ್ಯವಿದ್ದು, ಅಭ್ಯರ್ಥಿಗಳಿಗೆ ಆದ್ಯತಾ ಆಯ್ಕೆಗಳನ್ನು (ಆಪ್ಷನ್‌ ಎಂಟ್ರಿ) ದಾಖಲಿಸಲು ಗುರುವಾರ ಸಂಜೆಯಿಂದ ಅವಕಾಶ ಕಲ್ಪಿಸಲಾಗಿದೆ.

‍‘ಪೂರಕ ಪರೀಕ್ಷೆ ಬರೆದು ಉತ್ತೀರ್ಣರಾದವರಿಗೆ ಎಂಜಿನಿಯರಿಂಗ್‌ ಸೀಟುಗಳನ್ನು ಆಯ್ಕೆ ಮಾಡಲು ಅವಕಾಶ ಇದೆ. ಆದರೆ, ಕೃಷಿ ಸಂಬಂಧಿಸಿದ ಕೋರ್ಸ್‌ಗಳಿಗೆ ಅವಕಾಶ ಕೊಡದೆ, ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ’ ಎಂದು ಪೋಷಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದರು.

‘ದ್ವಿತೀಯ ಪಿಯು ಫಲಿತಾಂಶ ಬಂದ ತಿಂಗಳ ಒಳಗಾಗಿ ಪೂರಕ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ತೇರ್ಗಡೆ ಹೊಂದಿದವರಿಗೆ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಅರ್ಹತೆ ಇಲ್ಲವೇ’ ಎಂದು ಪ್ರಶ್ನಿಸಿದರು.

ಈ ಸಂಬಂಧ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಪ್ರಾಧಿಕಾರದ ಅಧಿಕಾರಿಯೊಬ್ಬರು ‘ಉನ್ನತ ಶಿಕ್ಷಣ ಇಲಾಖೆ ಆದೇಶದ ಪ್ರಕಾರ, ಪೂರಕ ಪರೀಕ್ಷೆಯ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್‌ ಸೀಟುಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲು ಅವಕಾಶ ಇದೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.