ADVERTISEMENT

ಉ.ಕ. ಅಭಿವೃದ್ಧಿಗೆ ಬದ್ಧ: ಸಿಎಂ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2014, 12:55 IST
Last Updated 19 ಡಿಸೆಂಬರ್ 2014, 12:55 IST

ಬೆಳಗಾವಿ(ಪಿಟಿಐ): ಹಿಂದುಳಿದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಡಾ.ನಂಜುಂಡಪ್ಪ ಸಮಿತಿ ನೀಡಿರುವ ವರದಿಯ ಅನುಷ್ಠಾನವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಇಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದರು.

ಪ್ರಾದೇಶಿಕ ಅಸಮತೋಲನ ನಿವಾರಣೆ ಮಾಡುವಂತೆ ಉತ್ತರ ಕರ್ನಾಟಕದ ಜನಪ್ರತಿನಿಧಿಗಳು ಈ ವಿಚಾರದಲ್ಲಿ ಒಂದಾಗಿ ಧ್ವನಿ ಎತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೀಗೆ ಹೇಳಿದರು.

‘ಉತ್ತರ ಕರ್ನಾಟಕ ಅಭಿವೃದ್ಧಿಗೆ 30 ಸಾವಿರ ಕೋಟಿ ರೂಪಾಯಿ ವಿಶೇಷ ಪ್ಯಾಕೆಜ್ ಘೋಷಿಸಬೇಕು ಎಂದು ಸದನದಲ್ಲಿ ಆಗ್ರಹಿಸಿದ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಡಾ.ನಂಜುಂಡಪ್ಪ ಸಮಿತಿ ವರದಿಯನ್ನು ಐದು ವರ್ಷಗಳವರೆಗೆ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಮುಂದಿನ ತಿಂಗಳು ರೂ 400 ಕೋಟಿ ಅನುದಾನ ಒದಗಿಸಲಾಗುವುದು. ಉತ್ತರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಿದ್ದು, ಒಂದು ಸಾವಿರ ಕೋಟಿ ರೂಪಾಯಿ ವೆಚ್ಚಮಾಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರಾದೇಶಿಕ ಅಸಮತೋಲ ನಿವಾರಣೆಗೆ ಪ್ರತ್ಯೇಕ ರಾಜ್ಯ ಪರಿಹಾರವಾಗಲಾರದು. ಮುಂದಿನ ವರ್ಷ ಜೂನ್ ಅಂತ್ಯದ ವೇಳೆಗೆ 30 ಸಾವಿರ ಹುದ್ದೆಗಳನ್ನು ತುಂಬಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.