ADVERTISEMENT

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಾಕ್ಷ್ಯ ದೊರೆತಿದೆ: ಯು.ಟಿ. ಖಾದರ್

​ಪ್ರಜಾವಾಣಿ ವಾರ್ತೆ
Published 25 ಜೂನ್ 2017, 8:40 IST
Last Updated 25 ಜೂನ್ 2017, 8:40 IST
ಯು.ಟಿ. ಖಾದರ್
ಯು.ಟಿ. ಖಾದರ್   

ಮಂಗಳೂರು: ‘ಕಲ್ಲಡ್ಕ ಮತ್ತು ಬಂಟ್ವಾಳದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಆರ್‌ಎಸ್ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಕಾರಣ ಎಂಬ ಕಾಂಗ್ರೆಸ್‌ ಆರೋಪಕ್ಕೆ ಅಶ್ರಫ್ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ದೊರೆತಿದೆ’ ಎಂದು ಆಹಾರ ಸಚಿವ ಯು.ಟಿ. ಖಾದರ್ ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ‘ಅಶ್ರಫ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೆಲವು ದಿನಗಳ ಹಿಂದೆ ಪ್ರಭಾಕರ ಭಟ್ ಜೊತೆ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ. ಅದು ಕಲ್ಲಡ್ಕ ಗಲಭೆಗೆ ಸಂಬಂಧಿಸಿದ ಗೋಷ್ಠಿ. ಆ ಬಳಿಕ ಅಶ್ರಫ್ ಕೊಲೆ ನಡೆದಿದೆ. ಇದು ಸಂಶಯವನ್ನು ಮತ್ತಷ್ಟು ಬಲಗೊಳಿಸಿದೆ’ ಎಂದರು.

‘ಕೊಲೆ ಆರೋಪಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಕುರಿತು ಪೊಲೀಸರು ತನಿಖೆ ನಡೆಸಬೇಕಿದೆ. ಭಟ್ ಜೊತೆ ಮಾತುಕತೆ ನಡೆದಿತ್ತೇ ಎಂಬುದನ್ನು ತನಿಖಾ ತಂಡ ಪರಿಶೀಲಿಸಬೇಕು’ ಎಂದರು.

ADVERTISEMENT

ರಾಜಕೀಯಕ್ಕಾಗಿ ಸುಳ್ಳು ಆರೋಪ 
‘ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ರಾಜಕೀಯ ದುರುದ್ದೇಶದಿಂದ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಆಹಾರ ಸಚಿವ ಯು.ಟಿ. ಖಾದರ್ ವಾಗ್ದಾಳಿ ನಡೆಸಿದರು.

‘ಅವರು ಹಿಂದೆ ಹಲವು ಬಾರಿ ಆರೋಪ ಮಾಡಿದ್ದರು. ದಾಖಲೆ ಒದಗಿಸುವಂತೆ ಮನವಿ ಮಾಡಲಾಗಿತ್ತು. ಈಗಲೂ ದಾಖಲೆ‌ ಒದಗಿಸದ ಅವರು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.