ADVERTISEMENT

ಕಳಸಾ – ಬಂಡೂರಿ ಯೋಜನೆ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2015, 20:02 IST
Last Updated 26 ನವೆಂಬರ್ 2015, 20:02 IST

ಬೆಂಗಳೂರು: ಕಳಸಾ –ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ, ‘ರೈತ ಸೇನಾ ಕರ್ನಾಟಕ’ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದ ನೂರಾರು ರೈತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾಲ್ಕು ತಿಂಗಳಿಂದ ಹೋರಾಟ ನಡೆಯುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ರಸ್ತೆಯಲ್ಲಿ ಅಡ್ಡ ಮಲಗುವ ಮೂಲಕ ರಸ್ತೆ ತಡೆ ನಡೆಸಿದರು. ಆಗ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ನಂತರ ನಡೆದ ಪ್ರತಿಭಟನಾಸಭೆಯಲ್ಲಿ ಮಾತನಾಡಿದ ಸೇನಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಂಕರ ಅಂಬಲಿ, ‘ಉದ್ದೇಶಿತ ಯೋಜನೆಯಿಂದ ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗುವುದು. ಜತೆಗೆ ಸಾವಿರಾರು ಎಕರೆ ನೀರಾವರಿ ಪ್ರದೇಶವಾಗಲಿದೆ’ ಎಂದರು.

‘ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋದರೂ, ಏನೂ ಪ್ರಯೋಜನವಾಗಿಲ್ಲ. ಮೋದಿ ಅವರು ಯಾರನ್ನು ಪ್ರತಿನಿಧಿಸುತ್ತಿದ್ದಾರೆ ಎಂಬುದೇ ಸಂಶಯವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದೇಶದ ಬೆನ್ನೆಲುಬಾದ ರೈತರು ಮತ್ತು ಅವರ ಸಮಸ್ಯೆಗಳನ್ನು ಕಡೆಗಣಿಸಿದರೆ ಮುಂದೆ ದೊಡ್ಡ ಅಪಾಯ ಕಾದಿದೆ’ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಿಂದಾಗಿ ಶೇಷಾದ್ರಿ ರಸ್ತೆ ಸೇರಿದಂತೆ, ಸುತ್ತಮುತ್ತಲಿನ ರಸ್ತೆಗಳಲ್ಲಿ ಕೆಲ ಹೊತ್ತು ಸಂಚಾರ ದಟ್ಟಣೆ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.