ADVERTISEMENT

ಕಾಂಗ್ರೆಸ್‌ ಕಚೇರಿಗೆ ಬಂದ ಸಚಿವರು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2014, 19:50 IST
Last Updated 18 ಸೆಪ್ಟೆಂಬರ್ 2014, 19:50 IST

ಬೆಂಗಳೂರು: ನಿಯಮಿತವಾಗಿ ಪಕ್ಷದ ಕಚೇರಿಗೆ ಭೇಟಿ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ಸಚಿವರಿಗೆ ಪತ್ರ ಬರೆದಿರುವ ಬೆನ್ನಲ್ಲೇ ಗುರುವಾರ ಗೃಹ ಸಚಿವ ಕೆ.ಜೆ.ಜಾರ್ಜ್‌ ಮತ್ತು ಅರಣ್ಯ ಸಚಿವ ರಮಾನಾಥ ರೈ ಕಾಂಗ್ರೆಸ್‌ ಕಚೇರಿಯಲ್ಲಿ ಕಾಣಿಸಿ­ಕೊಂಡರು. ಕಾರ್ಯ­ಕರ್ತರ ಅಹವಾಲು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಿಸಾನ್‌ ಘಟಕದ ಉಪಾಧ್ಯಕ್ಷ ಡಾ.ಆನಂದ್‌ ಕುಮಾರ್‌ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿ  ಮಾತನಾಡಿದ ಸಚಿವ ಜಾರ್ಜ್‌, ‘ಹೋರಾಟಕ್ಕೆ ಸಂಬಂಧಿಸಿದ ರೈತರ ಮೇಲಿನ ಮೊಕದ್ದಮೆಗಳನ್ನು ಹಿಂದೆಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಈ ಕುರಿತು ಪ್ರತಿ ಜಿಲ್ಲೆಯಿಂದ ಮಾಹಿತಿ ಪಡೆದು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದರು. ಕೈದಿಗಳ ಬಿಡುಗಡೆ ವಿಚಾರವಾಗಿ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಯಾವುದೇ ಸಂಘರ್ಷ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರೆಸಾರ್ಟ್‌ಗೆ ಅವಕಾಶವಿಲ್ಲ: ಅರಣ್ಯ ಪ್ರದೇಶದಲ್ಲಿ ರೆಸಾರ್ಟ್‌ ನಿರ್ಮಾಣಕ್ಕೆ ಸರ್ಕಾರ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದರು.

10 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವ ರೈತರನ್ನು ತೆರವುಗೊಳಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ಹಾಸನ ಜಿಲ್ಲೆಯ ಆಲೂರಿನ ಸುತ್ತಮುತ್ತ ರೈತರಿಗೆ ತೊಂದರೆ ಕೊಡುತ್ತಿದ್ದ 20 ಆನೆಗಳನ್ನು ಸೆರೆಹಿಡಿ­ಯಲಾಗಿದೆ. ಕಾಡು ಪ್ರಾಣಿಗಳಿಂದ ಮೃತರಾದವರ ಕುಟುಂಬಗಳಿಗೆ ₨5 ಲಕ್ಷ ಪರಿಹಾರ ನೀಡಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.