ADVERTISEMENT

ಬರಪೀಡಿತ ಪ್ರದೇಶಗಳಲ್ಲಿ ಕಾಮಗಾರಿಗೆ ಆಗ್ರಹ

ಕಾರ್ಯಕಾರಿಣಿಯಲ್ಲಿ ಒಕ್ಕೊರಲ ನಿರ್ಣಯ: ಅರವಿಂದ ಲಿಂಬಾವಳಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2017, 19:30 IST
Last Updated 21 ಜನವರಿ 2017, 19:30 IST

ಕಲಬುರ್ಗಿ:  ಬರಪೀಡಿತ ಪ್ರದೇಶಗಳಲ್ಲಿ ಸಮರೋಪಾದಿ ಪರಿಹಾರ ಕಾಮಗಾರಿ ಕೈಗೊಳ್ಳಬೇಕು. ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು. 371(ಜೆ) ಕಾಯ್ದೆಯಲ್ಲಿನ ನ್ಯೂನತೆ ಸರಿಪಡಿಸಬೇಕು.

ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಕೈಗೊಳ್ಳಲಾದ ಪ್ರಮುಖ ನಿರ್ಣಯಗಳು ಇವು. ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ‘ರಾಜ್ಯದಲ್ಲಿ ಈಗಾಗಲೇ 139 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದ್ದು, ಇನ್ನೂ 25 ತಾಲ್ಲೂಕುಗಳ ಘೋಷಣೆ ಆಗಬೇಕಿದೆ. ಈ ತಾಲ್ಲೂಕುಗಳಲ್ಲಿ ಬರ ಪರಿಹಾರ ಕಾಮಗಾರಿ ಆರಂಭಿಸಬೇಕು. ಬರಪೀಡಿತ ಜಿಲ್ಲೆಗಳಲ್ಲಿನ 36.35 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆದ ಸುಮಾರು ₹17ಸಾವಿರ ಕೋಟಿ ಬೆಳೆ ಹಾನಿಯಾಗಿದೆ. ಪ್ರತಿ ಹೆಕ್ಟೇರ್‌ಗೆ ₹6,350 ಪರಿಹಾರ ಕೊಡಬೇಕು’ ಎಂದು ಒತ್ತಾಯಿಸಲಾಯಿತು ಎಂದರು.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. 2014ರಿಂದ ಇದುವರೆಗೆ 2,160 ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿರುವುದು ಅತ್ಯಂತ ಕಳವಳಕಾರಿಯಾಗಿದೆ.  ಎಚ್.ವೈ.ಮೇಟಿ ಪ್ರಕರಣದಲ್ಲಿ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ಈ ಎಲ್ಲಾ ಪ್ರಕರಣಗಳಲ್ಲಿನ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. 371 (ಜೆ) ಕಾಯ್ದೆ ಅನುಷ್ಠಾನದಲ್ಲಿನ ನ್ಯೂನತೆ ಸರಿಪಡಿಸಬೇಕು. ಹೈದರಾಬಾದ್‌ ಕರ್ನಾಟಕ ಹೊರತಾದ ಜಿಲ್ಲೆಗಳಲ್ಲಿ ಉದ್ಯೋಗದಲ್ಲಿ ಶೇ 8 ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿ ಕೋರ್ಟ್‌   ತಡೆಯಾಜ್ಞೆ ತೆರವುಗೊಳಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.