ADVERTISEMENT

ಮಹಾಮಸ್ತಕಾಭಿಷೇಕ ₹ 575 ಕೋಟಿ ಯೋಜನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2016, 19:30 IST
Last Updated 29 ಜೂನ್ 2016, 19:30 IST

ಬೆಂಗಳೂರು: ಶ್ರವಣಬೆಳಗೊಳದಲ್ಲಿ  2018ರಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವದ  ಸಿದ್ಧತೆಗಾಗಿ ₹ 575 ಕೋಟಿ ಅಂದಾಜು ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆಯ ಬಳಿಕ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು  ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೊದಲ ಸಭೆ ನಡೆಸಲಾಗಿದೆ. 35ರಿಂದ 40 ಲಕ್ಷ ಜನರು ಮಹೋತ್ಸವದಲ್ಲಿ ಭಾಗವಹಿಸುವ ಕಾರಣ ಎರಡು ವರ್ಷ ಮುಂಚಿತವಾಗಿ ಸಿದ್ಧತೆ ಆರಂಭಿಸಲಾಗಿದೆ ಎಂದರು.

ಅಂತರರಾಷ್ಟ್ರೀಯ ಮಟ್ಟದ ಈ ಮಹೋತ್ಸವಕ್ಕೆ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರನ್ನು ಆಹ್ವಾನಿಸಲಾಗುವುದು. ಇದೇ ಸಂದರ್ಭದಲ್ಲಿ ಪ್ರಾಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದರು.

ಶ್ರವಣಬೆಳಗೊಳದಲ್ಲಿ 700 ಎಕರೆ ಜಾಗದಲ್ಲಿ 25 ಸಾವಿರ ತಾತ್ಕಾಲಿಕ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುವುದು. ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಮೂಲಸೌಕರ್ಯ ಕಲ್ಪಿಸಲಾಗುವುದು. ಲೋಕೋಪಯೋಗಿ ಇಲಾಖೆ ಮೂಲಕ ₹ 400 ಕೋಟಿ ಮೊತ್ತದ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಮಹೋತ್ಸವಕ್ಕೆ ದೇಶ ವಿದೇಶದಿಂದ ಭಕ್ತರು ಬರಲಿದ್ದಾರೆ. ಅವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಅವರು ವಿವರಿಸಿದರು.

ದೇವೇಗೌಡ ಗೈರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ 2018ರ ಮಹಾಮಸ್ತಕಾಭಿಷೇಕ ಮಹೋತ್ಸವ  ಮೊದಲ ಪೂರ್ವಭಾವಿ ಸಭೆಗೆ ಹಾಸನ ಸಂಸದ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಗೈರಾದರು.

‘ಮಹೋತ್ಸವ ಸಮಿತಿ ಸಂರಕ್ಷಕರಾಗಿರುವ ದೇವೇಗೌಡರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಕಾರಣಾಂತರಗಳಿಂದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ನೆರವು ಕೊಡಿಸಲು ಪ್ರಯತ್ನಿಸುವುದಾಗಿ ದೇವೇಗೌಡ ಭರವಸೆ ನೀಡಿದ್ದಾರೆ’ ಎಂದು ಸಮಿತಿ ಪ್ರಮುಖರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT