ADVERTISEMENT

ಮೂರು ವರ್ಷಕ್ಕೊಮ್ಮೆ ಸಾಹಿತ್ಯ ಸಮ್ಮೇಳನಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2017, 19:30 IST
Last Updated 18 ನವೆಂಬರ್ 2017, 19:30 IST

ಮೈಸೂರು: ಜಾತ್ರೆಯಂತೆ ಆಗಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಮೂರು ವರ್ಷಕ್ಕೊಮ್ಮೆ ಆಯೋಜಿಸುವುದು ಸೂಕ್ತ ಎಂದು ನಟ ‘ಮುಖ್ಯಮಂತ್ರಿ’ ಚಂದ್ರು ಅಭಿಪ್ರಾಯಪಟ್ಟರು.

ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ಪ್ರತಿ ವರ್ಷ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಿಂದ ಯಾವ ಪ್ರಯೋಜನವೂ ಆಗುತ್ತಿಲ್ಲ. ಸಮ್ಮೇಳನದಲ್ಲಿ ಕೈಗೊಳ್ಳುವ ನಿರ್ಣಯಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗುತ್ತಿಲ್ಲ. ಸರೋಜಿನಿ ಮಹಿಷಿ ವರದಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ನಿರ್ಣಯ ಕೈಗೊಳ್ಳಲಾಗುತ್ತಿದೆ. ಆದರೆ, ಇನ್ನೂ ಜಾರಿಯಾಗಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಉದ್ಯೋಗ ಸಮಸ್ಯೆ ಬಿಗಡಾಯಿಸುತ್ತಿದೆ. ಕನ್ನಡಕ್ಕೆ ಅಪಾಯ ಎದುರಾಗಿದೆ. ವರ್ಷದೊಳಗೆ ಅನುಷ್ಠಾನಕ್ಕೆ ತರಲು ಸಾಧ್ಯವಾಗುವಂತಹ ನಿರ್ಣಯಗಳನ್ನು ಕೈಗೊಳ್ಳುವುದು ಒಳಿತು. ಸರ್ಕಾರದ ಮೇಲೆ ಒತ್ತಡ ಹೇರಲು ಇದರಿಂದ ಅನುಕೂಲವಾಗುತ್ತದೆ. ದೀರ್ಘಕಾಲದವರೆಗೆ ಚರ್ಚೆಯಲ್ಲೇ ಕಳೆದುಹೋಗುವಂತಹ ನಿರ್ಣಯ ತೆಗೆದುಕೊಳ್ಳುವುದರಿಂದ ಯಾವ ಪ್ರಯೋಜನವೂ ಇಲ್ಲ’ ಎಂದು ಪ್ರತಿಪಾದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.