ADVERTISEMENT

ಮೇಕೆದಾಟು: ತಿರುಗೇಟು ನೀಡಲು ರಾಜ್ಯದ ತಯಾರಿ

ತಮಿಳುನಾಡಿನತ್ತ ರಾಜ್ಯದ ಬಸ್‌ ಸಂಚಾರ: ನಿರ್ಧಾರ ಇಂದು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2015, 19:34 IST
Last Updated 27 ಮಾರ್ಚ್ 2015, 19:34 IST

ಬೆಂಗಳೂರು: ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡಿಗೆ ತಿರುಗೇಟು ನೀಡಲು ಸರ್ಕಾರ ಸಜ್ಜಾಗಿದ್ದು, ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ವಿಧಾನ ಪರಿಷತ್‌ನಲ್ಲಿ ಹೇಳಿದರು.

ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಗಣೇಶ್‌ ಕಾರ್ಣಿಕ್‌ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಈ ವಿಷಯ ಸರ್ಕಾರದ ಗಮನಕ್ಕೆ ಬಂದಿದೆ. ರಾಜಕೀಯವಾಗಿ ಹಾಗೂ ಕಾನೂನಾತ್ಮಕ ಹೋರಾಟಕ್ಕೆ ರಾಜ್ಯ ಸಿದ್ಧವಿದೆ’ ಎಂದರು. ‘ಮೇಕೆದಾಟು ಬಳಿ ವಿದ್ಯುತ್‌ ಉತ್ಪಾದನೆ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾವೇರಿ ನೀರಿಗೆ ಅಡ್ಡವಾಗಿ ಅಣೆಕಟ್ಟು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಈಗಾಗಲೇ ಸಂಪೂರ್ಣ ವರದಿ ತಯಾರಿಸಲಾಗಿದೆ’ ಎಂದು ಹೇಳಿದರು.

ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ, ‘192 ಟಿಎಂಸಿ ನಮ್ಮ ನೀರು. ಇದನ್ನು ಬಳಸಿಕೊಳ್ಳಲು ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಾಗಿಲ್ಲ. ಅಗತ್ಯಬಿದ್ದರೆ ಪ್ರಧಾನಿ ಬಳಿ ಹೋಗೋಣ. ಈ ವಿಷಯದಲ್ಲಿ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ.

ಮೊದಲು ಯೋಜನೆ ಕೈಗೆತ್ತಿಕೊಳ್ಳಿ’ ಎಂದರು. ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್‌ ಸದಸ್ಯ ವಿ.ಎಸ್‌.ಉಗ್ರಪ್ಪ, ‘ಯಾವುದೇ ವಿಳಂಬ ಮಾಡದೆ ಮೇಕೆದಾಟು ಯೋಜನೆ ಮುಂದುವರಿಸಿ’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.