ADVERTISEMENT

‘ವೈಮಾನಿಕ ಸಮೀಕ್ಷೆಯಿಂದ ವಾಸ್ತವ ಸ್ಥಿತಿ ತಿಳಿಯದು’

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2016, 19:30 IST
Last Updated 27 ಸೆಪ್ಟೆಂಬರ್ 2016, 19:30 IST
ಬೀದರ್‌ ಜಿಲ್ಲೆಯ ಔರಾದ್ ತಾಲ್ಲೂಕಿನ ಕೌಠಾ ಸಮೀಪ ಪ್ರವಾಹದಿಂದ ಬೆಳೆ ಹಾನಿಯಾಗಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಂಗಳವಾರ ವೀಕ್ಷಿಸಿದರು
ಬೀದರ್‌ ಜಿಲ್ಲೆಯ ಔರಾದ್ ತಾಲ್ಲೂಕಿನ ಕೌಠಾ ಸಮೀಪ ಪ್ರವಾಹದಿಂದ ಬೆಳೆ ಹಾನಿಯಾಗಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮಂಗಳವಾರ ವೀಕ್ಷಿಸಿದರು   

ಬೀದರ್: ‘ವೈಮಾನಿಕ ಸಮೀಕ್ಷೆಯಿಂದ ಅತಿವೃಷ್ಟಿ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿಯ ವಾಸ್ತವ ಸ್ಥಿತಿಯನ್ನು ಅರಿಯಲು ಸಾಧ್ಯವಾಗುವುದಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.

ಔರಾದ್ ತಾಲ್ಲೂಕಿನ ಕೌಠಾ ಬಳಿ ಮಾಂಜರಾ ನದಿಯ ನೆರೆಯಿಂದ ಬೆಳೆ ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸುತ್ತಿರುವುದು ತಪ್ಪಲ್ಲ. ಆದರೆ, ಅದು ರಿವಾಜು ಆಗಬಾರದು. ವೈಮಾನಿಕ ಸಮೀಕ್ಷೆಯಿಂದ ಪರಿಸ್ಥಿತಿಯ ಗಂಭೀರತೆ ಗಮನಕ್ಕೆ ಬರುವುದಿಲ್ಲ. ಕಾರಣ ಮುಖ್ಯಮಂತ್ರಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಬೆಳೆ ನಷ್ಟವಾದ ಎಲ್ಲ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದೇನೆ. ಸಮೀಕ್ಷೆ ನಂತರ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದೇನೆ’ ಎಂದು ಹೇಳಿದರು.

ಕೃಷಿ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಪರಿಹಾರ ನೀಡಲು ಆಗ್ರಹ: ಬೆಳೆ ಹಾನಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.  ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ನೀಡಬೇಕು. ಮಳೆ ಹಾನಿ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಬೇಕು. ಕೇಂದ್ರದಿಂದ ಅನುದಾನ ಬಿಡುಗಡೆಯಾಗುವ ವರೆಗೆ ಕಾಯದೆ ರೈತರಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮಳೆ ಹಾನಿ ಪರಿಹಾರಕ್ಕೆ ಹೆಚ್ಚಿನ ನೆರವು ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.