ADVERTISEMENT

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2017, 19:30 IST
Last Updated 15 ಏಪ್ರಿಲ್ 2017, 19:30 IST
ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ
ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ   

ನವದೆಹಲಿ: ಉಪ ಚುನಾವಣೆಯ ಭರ್ಜರಿ ಗೆಲುವಿನ ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೈಕಮಾಂಡ್ ಭೇಟಿ ಮಾಡಿ, ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆ ನಡೆಸಿದರು.

ಪಕ್ಷದ ರಾಜ್ಯ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಅವರನ್ನು ಶುಕ್ರವಾರ ರಾತ್ರಿ ಭೇಟಿ ಮಾಡಿದ್ದ ಮುಖ್ಯಮಂತ್ರಿಯವರ ನಿಯೋಗವು, ಶನಿವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ್‌, ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿತು.

ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಸಮ್ಮತಿ ಸೂಚಿಸುವಂತೆ ಈ ಭೆಟಿಯ ವೇಳೆ ಕೋರಲಾಯಿತು.

ADVERTISEMENT

ಸಂಪುಟ ವಿಸ್ತರಣೆ ಮುಂದಕ್ಕೆ: ವಿಧಾನ ಪರಿಷತ್‌ಗೆ ನಾಮನಿರ್ದೇಶನ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ವರಿಷ್ಠರೊಂದಿಗೆ ಚರ್ಚಿಸಲಾಯಿತು. ವಿಧಾನ ಪರಿಷತ್‌ ನಾಮ ನಿರ್ದೇಶನಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಹೈಕಮಾಂಡ್‌ಗೆ ಪಟ್ಟಿ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಆ ಪಟ್ಟಿಗೆ ಒಪ್ಪಿಗೆ ದೊರೆಯುವ ಭರವಸೆ ಇದೆ ಎಂದು ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ತಿಳಿಸಿದರು.

‘ಸಚಿವ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿ ಇದ್ದು, ಭರ್ತಿ ಮಾಡುವ ಕುರಿತು ಈಗ ಪ್ರಸ್ತಾಪಿಸಲಾಗಿಲ್ಲ. ಮುಂದಿನ ತಿಂಗಳು ಈ ಕುರಿತು ಚರ್ಚೆ ನಡೆಸಲಾಗುವುದು. ಗುಂಡ್ಲುಪೇಟೆ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಜಯಿಸಿರುವ ಮೋಹನ್‌ಕುಮಾರಿ ಅವರನ್ನು ಮಂತ್ರಿ ಮಾಡುವುದಾಗಿ ನಾನು ಎಲ್ಲಿಯೂ, ಯಾರಿಗೂ ಹೇಳಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್‌ ಜೊತೆ ಈ ಹಿಂದೆಯೇ ಮಾತುಕತೆ ನಡೆಸಲಾಗಿದೆ. ಆದಷ್ಟು ಶೀಘ್ರ ಈ ಕುರಿತು ತೀರ್ಮಾನ ಕೈಗೊಳ್ಳುವಂತೆ ಈಗ ತಿಳಿಸಲಾಯಿತು. ಬಹುಶಃ ಈ ಬಗ್ಗೆ ಇನ್ನಷ್ಟು ಚರ್ಚಿಸಿದ ನಂತರವೇ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಮೂರು ಸ್ಥಾನಗಳ ನಾಮನಿರ್ದೇಶನಕ್ಕೆ  ಸಂಬಂಧಿಸಿದಂತೆ ಸಲ್ಲಿಸಲಾದ ಪಟ್ಟಿಯಲ್ಲಿ ಯಾರ ಹೆಸರು ಇದೆ ಎಂಬುದನ್ನು ಮುಖ್ಯಮಂತ್ರಿ ಬಹಿರಂಗಪಡಿಸಲಿಲ್ಲ. ಆದರೆ, ಸಿ.ಎಂ. ಲಿಂಗಪ್ಪ, ಕೊಂಡಜ್ಜಿ ಮೋಹನ್‌ ಹಾಗೂ ಕೆ.ಪಿ. ನಂಜುಂಡಿ ಅವರ ಹೆಸರುಗಳು ಬಹುತೇಕ ಅಂತಿಮಗೊಂಡಿವೆ ಎಂದು ತಿಳಿದುಬಂದಿದೆ.

ನೇಮಕಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆಕಾಂಕ್ಷಿಗಳಿದ್ದು, ವರಿಷ್ಠರ ಮೂಲಕ ತೀವ್ರ ಪ್ರಯತ್ನ ಮುಂದುವರಿಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಅವರಿಗೆ ಆಪ್ತವಾಗಿರುವ ಜಿ.ಸಿ. ಚಂದ್ರಶೇಖರ್‌ ಒಕ್ಕಲಿಗೆ ಸಮುದಾಯದಿಂದ, ಪತ್ರಕರ್ತ ಇಂದ್ರಜಿತ್‌ ಲಂಕೇಶ್‌ ಲಿಂಗಾಯತ ಸಮುದಾಯದಿಂದ, ಹಿಂದುಳಿದ ವರ್ಗಕ್ಕೆ ಸೇರಿರುವ ಬೆಂಗಳೂರಿನ ಮಾಜಿ ಮೇಯರ್‌ ಪಿ.ಆರ್‌. ರಮೇಶ್‌ ತೀವ್ರ ಯತ್ನ ನಡೆಸಿದವರಲ್ಲಿ ಪ್ರಮುಖರಾಗಿದ್ದಾರೆ.

‘ಅಭಿವೃದ್ಧಿಯೇ ನಮಗೆ ಮಾದರಿ’:  ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪಕ್ಷವು ವಿಶಿಷ್ಟ ಕಾರ್ಯತಂತ್ರ ರೂಪಿಸಲಿದೆ. ಟಿಕೆಟ್‌ ಹಂಚಿಕೆ ಕುರಿತಂತೆ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲಿದೆ. ಈ ನಿಟ್ಟಿನಲ್ಲಿ ಪ್ರಶಾಂತ್ ಕಿಶೋರ್ ಸೇರಿದಂತೆ ಯಾರ ನೆರವನ್ನೂ ಬಯಸುವುದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.