ADVERTISEMENT

ಸಿದ್ದರಾಮಯ್ಯರಿಂದ ಕಾಂಗ್ರೆಸ್ ಸಮಾಧಿ: ಶ್ರೀರಾಮುಲು ಟೀಕೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2016, 19:30 IST
Last Updated 24 ಅಕ್ಟೋಬರ್ 2016, 19:30 IST
ಸಿದ್ದರಾಮಯ್ಯರಿಂದ ಕಾಂಗ್ರೆಸ್ ಸಮಾಧಿ: ಶ್ರೀರಾಮುಲು ಟೀಕೆ
ಸಿದ್ದರಾಮಯ್ಯರಿಂದ ಕಾಂಗ್ರೆಸ್ ಸಮಾಧಿ: ಶ್ರೀರಾಮುಲು ಟೀಕೆ   

ಬೀದರ್:  ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷವನ್ನು ಸಮಾಧಿ ಮಾಡಿದ ನಂತರವೇ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ’ ಎಂದು ಸಂಸದ ಬಿ.ಶ್ರೀರಾಮುಲು ಹೇಳಿದರು. ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಮೊದಲು ಅಹಿಂದ ಮುಖಂಡರಿಂದ ದೊಡ್ಡ ಕ್ರಾಂತಿಯೇ ಆಗಲಿದೆ ಎನ್ನುವ ಭ್ರಮೆ ಇತ್ತು. ಜನರು ಕಾಂಗ್ರೆಸ್‌ಗೆ ಅಧಿಕಾರ ನೀಡಿದ ನಂತರ ಎಲ್ಲವೂ ಹುಸಿಯಾಗಿದೆ’ ಎಂದು ಟೀಕಿಸಿದರು.

‘ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಮಾಜಿ ಶಾಸಕ ವಿ.ಶ್ರೀನಿವಾಸ ಪ್ರಸಾದ್‌ ಅವರು ಬಿಜೆಪಿಗೆ ಬರುವುದಾದರೆ ಸ್ವಾಗತವಿದೆ.  ಅವರು ಬಂದರೆ ನಮ್ಮ ಪಕ್ಷಕ್ಕೆ ಇನ್ನಷ್ಟು ಬಲ ಬರಲಿದೆ’ ಎಂದು ಹೇಳಿದರು.

‘ಉಪಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ’(ರಾಯಚೂರು ವರದಿ):  ‘ಮುಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ನಾನು ಉಪಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ. ಪಕ್ಷ ಮುಖ್ಯವೇ ಹೊರತು ವ್ಯಕ್ತಿಯಲ್ಲ. ಹಾಗಾಗಿ ಪಕ್ಷ ನೀಡುವ ಯಾವುದೆ ಜವಾಬ್ದಾರಿ ಹೊರುವೆ’ ಎಂದು ಸಂಸದ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. 176 ತಾಲ್ಲೂಕು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕು. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ₹2,264 ಕೋಟಿ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಖರ್ಚು ಮಾಡಿಲ್ಲ. ಕಾನೂನು ಸುವ್ಯವಸ್ಥೆ ಹಾಳಾಗಿದೆ.ರಾಜ್ಯದ ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.