ADVERTISEMENT

ಹೈಕೋರ್ಟ್‌ ಆದೇಶಕ್ಕೆ ‘ಸುಪ್ರೀಂ’ ತಡೆ

ಜನಾರ್ದನ ರೆಡ್ಡಿ ವಿರುದ್ಧದ ಇ.ಡಿ ದೋಷಾರೋಪ ರದ್ದು

​ಪ್ರಜಾವಾಣಿ ವಾರ್ತೆ
Published 24 ಜುಲೈ 2017, 19:30 IST
Last Updated 24 ಜುಲೈ 2017, 19:30 IST
ಹೈಕೋರ್ಟ್‌ ಆದೇಶಕ್ಕೆ  ‘ಸುಪ್ರೀಂ’ ತಡೆ
ಹೈಕೋರ್ಟ್‌ ಆದೇಶಕ್ಕೆ ‘ಸುಪ್ರೀಂ’ ತಡೆ   

ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಹಾಗೂ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರಲ್ಲಿದ್ದ ₹ 900 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ರದ್ದುಪಡಿಸಿ ರಾಜ್ಯ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ಎಫ್‌. ನಾರಿಮನ್‌ ಹಾಗೂ ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಲಾಲ್‌ ಅವರಿದ್ದ ದ್ವಿಸದಸ್ಯ ಪೀಠವು, ‘ಹೈಕೋರ್ಟ್‌ ಆದೇಶದ ಪರಿಣಾಮದ ಕುರಿತು ನಾವು ಚಿಂತಿತರಾಗಿದ್ದೇವೆ’ ಎಂದು ಅಭಿಪ್ರಾಯಪಟ್ಟಿತಲ್ಲದೆ, ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿ ಆದೇಶಿಸಿತು.

ಪ್ರಕರಣದ ಕುರಿತು 4 ವಾರಗಳೊಳಗೆ ಅಫಿಡವಿಟ್‌ ಸಲ್ಲಿಸುವಂತೆ ಇ.ಡಿ. ಪರ ವಕೀಲ ಅಜಿತ್‌ಕುಮಾರ್‌ ಸಿನ್ಹಾ ಅವರಿಗೆ ಸೂಚಿಸಿತು. ಕಳೆದ ಮಾರ್ಚ್‌ 13ರಂದು ಹೈಕೋರ್ಟ್‌ ನೀಡಿರುವ ಆದೇಶದಿಂದ ರೆಡ್ಡಿ ಅವರಿಗೆ ಸಂಬಂಧಿಸಿದ ಇತರ ಪ್ರಕರಣಗಳ ಮೇಲೂ ಪರಿಣಾಮ ಬೀರಲಿದೆ ಎಂದು ಅಟಾರ್ನಿ ಜನರಲ್‌ ವೇಣುಗೋಪಾಲ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.