ADVERTISEMENT

‘ಪೊಲೀಸರ ವೇತನ ಪರಿಷ್ಕರಣೆ ಶೀಘ್ರ’

​ಪ್ರಜಾವಾಣಿ ವಾರ್ತೆ
Published 24 ಮೇ 2016, 19:30 IST
Last Updated 24 ಮೇ 2016, 19:30 IST

ತುಮಕೂರು: ‘ಪೊಲೀಸರ ವೇತನ ಪರಿಷ್ಕರಣೆಯನ್ನು ಶೀಘ್ರ ಮಾಡಲಾಗುವುದು’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.

ಹೆಗ್ಗೆರೆಯ ಗಂಗಾಧರಯ್ಯ ಸ್ಮಾರಕ ಸಮುದಾಯ ಭವನದಲ್ಲಿ ಜಿಲ್ಲಾ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಮಂಗಳವಾರ ಆಯೋಜಿಸಿದ್ದ ನಿವೃತ್ತ ಪೊಲೀಸರ ರಾಜ್ಯಮಟ್ಟದ ಸಮಾವೇಶ ಹಾಗೂ 18ನೇ ವರ್ಷದ ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ  ಮಾತನಾಡಿದರು.


‘ಸಮಾಜದ ರಕ್ಷಣೆ, ಕಾನೂನು ಸುವ್ಯವಸ್ಥೆ ಪಾಲಿಸುವ ಜವಾಬ್ದಾರಿ ಪೊಲೀಸರ ಮೇಲಿದೆ. ಪೊಲೀಸರ ಕಾರ್ಯದಕ್ಷತೆ ಹೆಚ್ಚಿಸುವ ಸಲುವಾಗಿ ವೇತನ ಪರಿಷ್ಕರಣೆ ಪ್ರಕ್ರಿಯೆ ಸರ್ಕಾರದ ಹಂತದಲ್ಲಿದೆ. ಕನಿಷ್ಠ ₹ 20 ಸಾವಿರ ವೇತನ ನೀಡಿದರೆ ಕಾನ್‌ಸ್ಟೆಬಲ್‌ಗಳ ಜೀವನ ಸುಧಾರಣೆ ಕಾಣಲಿದೆ’ ಎಂದು ಹೇಳಿದರು.


‘ಪೊಲೀಸ್‌ ಸಿಬ್ಬಂದಿಗಾಗಿ ₹15 ಲಕ್ಷ ವೆಚ್ಚದಲ್ಲಿ ಎರಡು ಬೆಡ್‌ ರೂಂ, ಅಡುಗೆ ಮನೆ ಹಾಗೂ ಹಾಲ್‌ ಹೊಂದಿರುವ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸರ್ಕಾರ 11 ಸಾವಿರ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದು, ಈ ವರ್ಷ 4800 ಮನೆಗಳನ್ನು ನಿರ್ಮಿಸಲಾಗುತ್ತದೆ’ ಎಂದರು.
‘ನಿವೃತ್ತ ಪೊಲೀಸರಿಗೂ ಆರೋಗ್ಯ ಭಾಗ್ಯ ಯೋಜನೆ ವಿಸ್ತರಿಸುವ ಕುರಿತು ಪರಿಶೀಲಿಸಲಾಗುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.