ADVERTISEMENT

ಕೊಡಗು: ವ್ಯವಸ್ಥಿತ ಚರಂಡಿ ನಿರ್ಮಾಣಕ್ಕೆ ಯೋಜನೆ ರೂಪಿಸಲು ಸಿ.ಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2018, 17:29 IST
Last Updated 22 ಆಗಸ್ಟ್ 2018, 17:29 IST

ಬೆಂಗಳೂರು:ಮಳೆ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥಿತ ಚರಂಡಿ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಬೇಕು. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರಿ ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಕ್ಷಣವೇ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾಡಳಿತಕ್ಕೆ ಆದೇಶಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹಾಗೂ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರೊಂದಿಗೆ ಬುಧವಾರ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜಿಲ್ಲೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.

ಪರಿಹಾರ ಕೇಂದ್ರಗಳಲ್ಲಿ ಮಕ್ಕಳಿಗೆ ಶಾಲಾ ಪಠ್ಯ ಚಟುವಟಿಕೆ ಆರಂಭಿಸಲಾಗಿದೆ. ಐದು ಸಾವಿರ ಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಖ್ಯಮಂತ್ರಿಗೆ ವಿವರಿಸಿದರು.

ADVERTISEMENT

ಜಿಲ್ಲೆಯಲ್ಲಿ ಅಡುಗೆ ಅನಿಲ, ಗ್ಯಾಸ್ ಗೀಜರ್, ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನಿಗಾ ವಹಿಸಬೇಕು ಹಾಗೂ 50 ಸಾವಿರ ಆಹಾರ ಕಿಟ್‍ಗಳನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಕುಮಾರಸ್ವಾಮಿ ಸೂಚಿಸಿದರು.

‘ಜಿಲ್ಲೆಯಲ್ಲಿ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಪುನರ್ ಸ್ಥಾಪಿಸಲು ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪರಿಹಾರ ಕಾಮಗಾರಿಗಳನ್ನು ತಕ್ಷಣದಿಂದ ಪ್ರಾರಂಭಿಸಬೇಕು’ ಎಂದೂ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.