ADVERTISEMENT

ಉ.ಕ, ಅಲ್ಪಸಂಖ್ಯಾತರ ನಿರ್ಲಕ್ಷ್ಯ

ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಎಚ್‌.ಕೆ.ಪಾಟೀಲ ಪತ್ರ

​ಪ್ರಜಾವಾಣಿ ವಾರ್ತೆ
Published 6 ಜುಲೈ 2018, 19:37 IST
Last Updated 6 ಜುಲೈ 2018, 19:37 IST
   

ಬೆಂಗಳೂರು: ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಹಾಗೂ ಅಲ್ಪಸಂಖ್ಯಾತರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಶಾಸಕ ಎಚ್‌.ಕೆ.ಪಾಟೀಲ ಅವರು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

‘ಈ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳ ಗೆಲುವಿಗೆ ಕಾರಣೀಕರ್ತರಾಗಿರುವ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕೆಲವಾದರೂ ಹೊಸ ಕಾರ್ಯಕ್ರಮಗಳು ಬಜೆಟ್‌ನಲ್ಲಿ ಪ್ರಕಟಗೊಳ್ಳಬೇಕಾಗಿತ್ತು. ಈ ಬಜೆಟ್‌ನಲ್ಲಿ ಯಾವುದೇ ಹೊಸ ಕಾರ್ಯಕ್ರಮಗಳಾಗಲಿ, ವಿಶೇಷ ಹಣಕಾಸಿನ ಹಂಚಿಕೆಗಳಾಗಲಿ ಇಲ್ಲ. ಬಜೆಟ್‌ ಅಂಗೀಕಾರಕ್ಕೂ ಮುನ್ನ ಕೆಲವಾದರೂ ಕಾರ್ಯಕ್ರಮಗಳನ್ನು ಘೋಷಿಸಿ ಕೊರತೆ ನೀಗಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

‘ಈ ಬಜೆಟ್‌ ಬಗ್ಗೆ ಉತ್ತರ ಕರ್ನಾಟಕದ ಜನರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಕಳೆದ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಬಹಳಷ್ಟು ಹೊಸ ತಾಲ್ಲೂಕುಗಳು ರಚನೆಯಾಗಿವೆ. ಅವುಗಳಲ್ಲಿ ಬಹುಪಾಲು ತಾಲ್ಲೂಕುಗಳು ಉತ್ತರ ಕರ್ನಾಟಕದಲ್ಲಿವೆ. ಇವುಗಳಿಗೆ ಪೂರ್ಣಪ್ರಮಾಣದ ಮೂಲಸೌಕರ್ಯ ಒದಗಿಸಲು ವಿಶೇಷ ಕಾರ್ಯಕ್ರಮಗಳನ್ನು ಘೋಷಿಸಬೇಕಿತ್ತು’ ಎಂದು ಅವರು ಹೇಳಿದ್ದಾರೆ.

ADVERTISEMENT

‘1999–2004ರ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ, 2004–06ರ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಹಾಗೂ 2013–18ರ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಪ್ರಾದೇಶಿಕ ಅಸಮತೋಲನ ನಿವಾರಿಸಲು ಪ್ರಯತ್ನ ಮಾಡಲಾಗಿತ್ತು. ಸಮ್ಮಿಶ್ರ ಸರ್ಕಾರ ಇನ್ನಷ್ಟು ಯೋಜನೆಗಳನ್ನು ಘೋಷಿಸಿ ಅಭಿವೃದ್ಧಿಗೆ ನೆರವಾಗಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

**

‘ಗದಗಕ್ಕೆ ₹1,500 ಕೋಟಿ ಪಡೆದಿದ್ದಾಗ ಯಾರೂ ಪ್ರಶ್ನಿಸಿರಲಿಲ್ಲ’

‘ಗದಗ ಜಿಲ್ಲೆಯೊಂದಕ್ಕೆ ಕುಡಿಯುವ ನೀರಿನ ಯೋಜನೆಗಾಗಿಯೇ ಹಿಂದೆ ಪಾಟೀಲರು ₹ 1,500 ಕೋಟಿ ತೆಗೆದುಕೊಂಡು ಹೋದರು. ಆಗ ಯಾರೂ ಅವರನ್ನು ಪ್ರಶ್ನೆ ಮಾಡಿರಲಿಲ್ಲ’ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಪಾಟೀಲರಿಂದ ನನಗೆ ಯಾವುದೇ ಪತ್ರ ಬಂದಿಲ್ಲ. ಅವರು ಹಿರಿಯರು. ಪರಿಸ್ಥಿತಿ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ. ನಿರ್ದಿಷ್ವವಾಗಿ ಯಾವ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಹೇಳಿದರೆ, ಈಗಲೂ ಸರಿಪಡಿಸುತ್ತೇನೆ’ ಎಂದರು.

‘ಹೊಸದಾಗಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಏಳು ಕಾರ್ಖಾನೆಗಳ ಪೈಕಿ ಐದು ಕಾರ್ಖಾನೆಗಳನ್ನು ಉತ್ತರ ಕರ್ನಾಟಕ ಭಾಗದಲ್ಲೇ ಸ್ಥಾಪಿಸುತ್ತಿದ್ದೇವೆ. ಇಷ್ಟಾದರೂ, ಅವರು ಯಾಕೆ ಆರೋಪ ಮಾಡುತ್ತಿದ್ದಾರೆ ಗೊತ್ತಿಲ್ಲ’ ಎಂದೂ ಹೇಳಿದರು.

**

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಆರೋಪದ ವಿಚಾರವಾಗಿ ಬಹಿರಂಗ ಚರ್ಚೆಗೆ ಸಿದ್ಧ
–ಎಚ್‌.ಡಿ.ಕುಮಾರಸ್ವಾಮಿ,ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.