ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣಾ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸಿ

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಆಗ್ರಹ
Last Updated 21 ಮೇ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಇತ್ತೀಚೆಗೆ ಮೃತಪಟ್ಟ ಅರುಣಾ ಶಾನಭಾಗ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ₹ 1 ಕೋಟಿ ಮೊತ್ತದ ಅಂತರರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸಬೇಕು’ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಹೇಳಿದರು.

ಕನ್ನಡ ಒಕ್ಕೂಟವು ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಅರುಣಾ ಶಾನಭಾಗ ಅವರ  ಶ್ರದ್ಧಾಂಜಲಿ ಸಭೆಯಲ್ಲಿ  ಮಾತನಾಡಿದರು.
‘ಅತ್ಯಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಜಾಗೃತಿ ಮೂಡಿಸುತ್ತಿರುವ ದೇಶದ ಅಥವಾ ವಿದೇಶದ ಯಾವುದೇ ಮಹಿಳೆಯನ್ನು ಗುರುತಿಸಿ ಪ್ರಶಸ್ತಿ ನೀಡಬೇಕು. ಮುಂದಿನ ವರ್ಷದಿಂದಲೇ ಇದನ್ನು ಜಾರಿಗೆ ತರಬೇಕು’ ಎಂದರು.

ಅರುಣಾ ಅವರ ಹುಟ್ಟೂರು ಹೊನ್ನಾವರ ತಾಲ್ಲೂಕಿನ ಹಳದೀಪುರಕ್ಕೆ ಮೂಲಸೌಕರ್ಯಗಳನ್ನು ಕಲ್ಪಿಸಿ ಆದರ್ಶ ಗ್ರಾಮವನ್ನಾಗಿ ಅಭಿವೃದ್ಧಿಪಡಿಸಬೇಕು. ಅವರ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.

ಮಹಿಳೆಯರಿಗೆ ರಕ್ಷಣೆ ಒದಗಿಸಲು ದೇಶದಾದ್ಯಂತ ಮಹಿಳಾ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಅತ್ಯಾಚಾರಿಗಳಿಗೆ ಶಿಕ್ಷೆ ವಿಧಿಸಲು ವಿಶೇಷ ನ್ಯಾಯಾಲಯಗಳನ್ನು ತೆರೆಯಬೇಕು ಎಂದು ಹೇಳಿದರು.

ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್‌ ಮಾತನಾಡಿ, ‘ಭವಿಷ್ಯದ ಬಗ್ಗೆ ಸುಂದರ ಕನಸುಗಳನ್ನು ಕಟ್ಟಿಕೊಂಡು ಮುಂಬೈಗೆ ಹೋಗಿದ್ದ ಅರುಣಾ ಅವರು ಅಲ್ಲಿನ ಕೆಇಎಂ ಆಸ್ಪತ್ರೆಯ ವಾರ್ಡ್‌ಬಾಯ್‌ನಿಂದ ಅತ್ಯಾಚಾರಕ್ಕೊಳಗಾಗಿ 42 ವರ್ಷ ನರಕಯಾತನೆ ಅನುಭವಿಸಿದರು.  ಆದರೆ, ಅತ್ಯಾಚಾರ ಎಸಗಿದ ಸೋಹನ್‌ಲಾಲ್‌ ಬಿ. ವಾಲ್ಮೀಕಿಗೆ ಕೇವಲ ಏಳು ವರ್ಷ ಶಿಕ್ಷೆ ವಿಧಿಸಲಾಯಿತು. ಇದು ದೇಶದ ದುರಂತ’ ಎಂದರು.

ಕೇಂದ್ರ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ಕಾಯ್ದೆ ರೂಪಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT