ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಪೌರಕಾರ್ಮಿಕರಿಗೂ ಉಪಾಹಾರ

Last Updated 30 ಏಪ್ರಿಲ್ 2016, 8:25 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯದ ವಿವಿಧೆಡೆ ಸ್ಥಳೀಯ ಸಂಸ್ಥೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವವರಿಗೆ ಏ. 30ರಿಂದಲೇ ಬೆಳಿಗ್ಗೆಯ ಉಪಾಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ನಾರಾಯಣ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಯಂ ಪೌರ ಕಾರ್ಮಿಕರಿಗೆ ಬೆಳಿಗ್ಗೆಯ ಉಪಾಹಾರ ನೀಡಲಾಗುತ್ತಿದೆ. ಇದನ್ನು ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರಿಗೂ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು.

ಪೌರ ಕಾರ್ಮಿಕರು ಬೆಳಿಗ್ಗೆ ಹಸಿವಿನಿಂದಲೇ ಕೆಲಸ ಆರಂಭಿಸುವ ಕಾರಣ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆಯಿದೆ. ಇದನ್ನು ತಡೆಯುವ ಉದ್ದೇಶದಿಂದ ಉಪಾಹಾರ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಸಚಿವ ಸಂಪುಟದಲ್ಲಿ ನಿರ್ಧಾರ: ಹೊರ ಗುತ್ತಿಗೆ ಪದ್ಧತಿ ರದ್ದು ಪಡಿಸುವಂತೆ ಹಲವು ಬಾರಿ ಮನವಿಗಳು ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಹೊರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ರಾಜ್ಯದಾದ್ಯಂತ 35 ಸಾವಿರ ಹೊರಗುತ್ತಿಗೆ ನೌಕರರು ಇದ್ದಾರೆ. ಇವರಿಗೆ ಸರ್ಕಾರದ ಯಾವ ಸೌಲಭ್ಯಗಳೂ ಸಿಗುತ್ತಿಲ್ಲ ಎಂದು ನಾರಾಯಣ ವಿಷಾದಿಸಿದರು.

ಅಧ್ಯಕ್ಷರ ಅಸಮಾಧಾನ:  ಪೌರ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ ಸೇರಿ ದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ತಲುಪಿಸುವುಂತೆ ಕಳೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಸೌಲಭ್ಯಗಳನ್ನು ವಿತರಣೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೌರ ಕಾರ್ಮಿಕರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ‘ಪೌರ ಕಾರ್ಮಿಕ ಅಭಿವೃದ್ಧಿ ನಿಗಮ’ ಸ್ಥಾಪನೆ ಮಾಡಲು ಉದ್ದೇಶಿಸಿದ್ದು ಇದು ಶೀಘ್ರವೇ ಕಾರ್ಯ ರೂಪಕ್ಕೆ ಬರಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಮೀರ್ ಅನೀಸ್ ಅಹಮ್ಮದ್‌ ಮಾತನಾಡಿ, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರಿಗೆ ನೀಡುತ್ತಿರುವ ಆರೋಗ್ಯ ಸೌಲಭ್ಯಗಳು ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೂ ದೊರೆಯಬೇಕು. ಅಧಿಕಾರಿಗಳು ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

ತಂಡ ರಚನೆ: ಕನಿಷ್ಠ ವೇತನ, ಪಿಎಫ್‌ ಸೌಲಭ್ಯಗಳು ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ವಿತರಣೆ ಆಗುತ್ತಿವೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಲು ತಂಡ ರಚಿಸಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೂ ಮೊದಲು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಆಯುಕ್ತ ಬಿ.ಬಿ.ಪುಷ್ಪಾವತಿ, ಜಿಲ್ಲಾ ಪಂಚಾಯಿತಿ ಪಂಚಾಯಿತಿ ಸಿಇಒ ಚಾರುಲತಾ ಸೋಮಲ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಕೃಷ್ಣೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್. ಶ್ರೀರಂಗಪ್ಪ, ಜಿಲ್ಲಾ ಸರ್ಜನ್ ಡಾ.ಮುತ್ತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT