ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರು, ಮೇವಿಗೆ ಆದ್ಯತೆ ನೀಡಿ

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಆಂಜನೇಯ ಸೂಚನೆ
Last Updated 25 ಏಪ್ರಿಲ್ 2014, 7:01 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಬಾಧಿಸದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮಿನಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಕಳೆದೆ­ರಡು ವರ್ಷಗಳಿಂದ ಜಿಲ್ಲೆಯಲ್ಲಿ ಮಳೆಯ ಕೊರತೆಯುಂಟಾಗಿದೆ. ಪರಿಣಾಮವಾಗಿ ಅಂತರ್ಜಲ ಮಟ್ಟ ತೀವ್ರ ಕುಸಿತವಾದಿದೆ. ಜಿಲ್ಲೆಯಾದ್ಯಂತ ಶೇ ೪೦ ರಷ್ಟು ಕೊಳವೆಬಾವಿಗಳು ಬತ್ತಿ ಹೋಗಿವೆ. ಹೊಸದುರ್ಗ ಸೇರಿದಂತೆ ವಿವಿಧ ತಾಲ್ಲೂಕುಗಳಲ್ಲಿ ಕೃಷಿ ಚಟುವಟಿಕೆಗಳಿಗಾಗಿ ರೈತರು ಸಾಕಷ್ಟು ಕೊಳವೆಬಾವಿಗಳನ್ನು ಕೊರೆಸಿ ರುವುದರಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಮಳೆ ಬರುವವರೆಗೆ ಸಮಸ್ಯೆ ಮುಂದುವರಿಯಲಿದೆ. ಜನರಿಗೆ ಕುಡಿಯುವ ನೀರು, ಜಾನುವಾರುಗೆ ಮೇವು ಹಾಗೂ ಜನರು ಉದ್ಯೋಗಕ್ಕಾಗಿ ಗುಳೆ ಹೋಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ಯಾವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆಯೋ ಅಂಥ ಕಡೆ ತಕ್ಷಣ  ಕೊಳವೆಬಾವಿ ಕೊರೆಸಿ ನೀರು ಪೂರೈಸಬೇಕು. ಇದಕ್ಕಾಗಿ ಒಂದೆರಡು ದಿನಗಳಲ್ಲಿ ಸರ್ಕಾರ ಅನುದಾನ ಬಿಡುಗಡೆ ಮಾಡಲಿದೆ. ಇದನ್ನು ಸರಿಯಾಗಿ ಬಳಕೆ ಮಾಡಿಕೊಂಡು ನೀರನ್ನು ಪೂರೈಸಬೇಕು. ಕೊಳವೆಬಾವಿ ಕೊರೆಸುವವರೆಗೆ ಕಾಯದೆ ಸಮಸ್ಯೆ ಬಂದ ಕಡೆ ತುರ್ತು ಕ್ರಮವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಶುದ್ಧ ನೀರು ದೊರೆಯದ ಕಡೆ  ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ಅಳವಡಿಸಲಾಗುತ್ತದೆ. ಈಗಾಗಲೇ ಕೊರೆದಿರುವ ಕೊಳವೆ ಬಾವಿಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಬೇಕೆಂದು ಬೆಸ್ಕಾಂ ಎಂಜಿನಿಯರ್‌ಗಳಿಗೆ ಸೂಚಿಸಿದರು.

‘ಮೇವಿನ ತೊಂದರೆಯಿಂದಾಗಿ ರೈತರು ಜಾನುವಾರುಗಳನ್ನು ಮಾರಾಟ ಮಾಡಬಾರದು. ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಣೆ ಮಾಡುವ ವಾಹನಗಳನ್ನು ತಪಾಸಣೆ ಮಾಡಿ ಅವುಗಳನ್ನು ರಕ್ಷಣೆ ಮಾಡಬೇಕು’ ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು.
ಜಾನುವಾರುಗಳ ಆರೈಕೆಗಾಗಿ ಅಗತ್ಯ ಇರುವ ಕಡೆ ಗೋಶಾಲೆಗಳನ್ನು ಪ್ರಾರಂಭಿಸಲಾಗುತ್ತದೆ. ಚಳ್ಳಕೆರೆ ತಾಲ್ಲೂಕಿನ ಹಿರೇಕೆರೆಹಳ್ಳಿಯಲ್ಲಿ ಗೋಶಾಲೆ ಪ್ರಾರಂಭಿಸಲು ಜನರು ಮನವಿ ಮಾಡಿದ್ದು ತಕ್ಷಣವೇ ಇಲ್ಲಿ ಗೋಶಾಲೆ ಪ್ರಾರಂಭಿಸಲು ಸೂಚಿಸಿ ಮೇವು, ನೀರು ಸೇರಿದಂತೆ ಇಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಮಾರ್ಚ್ ೭ ರಂದು ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ಆಲಿಕಲ್ಲು ಮಳೆಯಿಂದಾಗಿ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಇದಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆದರೆ ನೀತಿ ಸಂಹಿತೆ ಕಾರಣ ಪರಿಹಾರ ವಿತರಣೆ ವಿಳಂಬವಾಗಿದೆ. ಮಳೆ ಹಾನಿಯಾಗಿ ಸಾಕಷ್ಟು ದಿನಗಳಾಗಿದ್ದು ಅವರಿಗೆ ತಕ್ಷಣವೇ ಪರಿಹಾರ ನೀಡಿಬೇಕಿರುವು ದರಿಂದ ಬರುವ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಮಂಜುಶ್ರೀ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT