ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಸಿಪಿಎಂ ಪ್ರತಿಭಟನೆ

Last Updated 26 ಜುಲೈ 2016, 10:15 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ  ಸಿಪಿಐಎಂ ಕಾರ್ಯಕರ್ತರು ಸೋಮವಾರ ನಗರದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಇದೇ ಸಂದರ್ಭದಲ್ಲಿ ಸಿಪಿಐಎಂ  ಕಾರ್ಯದರ್ಶಿಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ‘ಕೇಂದ್ರ ಸರ್ಕಾರ ಜನರಿಗೆ ಬೆಲೆ ಏರಿಕೆ ಕೊಡುಗೆ ನೀಡುತ್ತಿದೆ. ಚುನಾವಣಾ ಸಂದರ್ಭದಲ್ಲಿ  ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ದಿನನಿತ್ಯ ಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಜನ ಸಾಮಾನ್ಯರು ಜೀವನ ನಡೆಸುವುದು ಕಷ್ಟವಾಗಿದೆ’ ಎಂದು ಹೇಳಿದರು.

‘ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಒಂದು ರೂಪಾಯಿ ದರದಲ್ಲಿ 35 ಕೆ.ಜಿ. ಅಕ್ಕಿ ವಿತರಿಸಬೇಕು. ಬಿಸಿಯೂಟ ಯೋಜನೆಯಡಿಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡಲು ಸಮಗ್ರ ಮಕ್ಕಳ ಅಭಿವೃದ್ಧಿ  (ಐಸಿಡಿಎಸ್) ಯೋಜನೆಗೆ ಹೆಚ್ಚಿನ ಅನುದಾನ ನೀಡಬೇಕು. ಜಿಲ್ಲೆಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿ ಉದ್ಯೋಗ ಸಮಸ್ಯೆ ನಿವಾರಣೆ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚಿನ ಅನುದಾನ ನೀಡಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಸರ್ಕಾರ ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆ ಭರ್ತಿ ಮಾಡಲು ಮುಂದಾಗಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕೆ.ಆರ್.ಮಂಜುಳಾ, ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಕೆ.ವಿ.ವೆಂಕಟಲಕ್ಷ್ಮಮ್ಮ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಚಿಂತಾಮಣಿ ವರದಿ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸಿಪಿಎಂ ಪಕ್ಷದ ತಾಲ್ಲೂಕು ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಮುಖಂಡ ಸಿ.ಗೋಪಿನಾಥ್‌ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.

ಪಕ್ಷದ ಜಿಲ್ಲಾ ಮುಖಂಡ ಸಿ.ಗೋಪಿನಾಥ್‌ ಮಾತನಾಡಿ ‘ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನರಿಗೆ ಶುಭ ದಿನಗಳು ಬರಲಿವೆ, ಅಗತ್ಯ ವಸ್ತುಗಳ ಬೆಲೆ ಇಳಿಸಲಾಗುವುದು, ಪ್ರತಿ ವರ್ಷ 2 ಕೋಟಿ ಜನರಿಗೆ ಉದ್ಯೋಗ ಒದಗಿಸುವುದು, ರೈತರ ಉತ್ಪನ್ನಗಳಿಗೆ ಒಟ್ಟು ವೆಚ್ಚಕ್ಕೆ ಲಾಭಾಂಶ ಸೇರಿಸಿ ಬೆಂಬಲ ಬೆಲೆ ನೀಡಿ, ಸಾಲಭಾದೆಯಿಂದ ವಿಮುಕ್ತಿಗೊಳಿಸುವುದಾಗಿ ಭರವಸೆ ನೀಡಿತ್ತ ಆ ಭರವಸೆಗಳು ಭರವಸೆಯಾಗಿಯೇ ಉಳಿದಿವೆ’ ಎಂದು ದೂರಿದರು.  ‘ಮುಖಂಡರಾದ ಲಕ್ಷ್ಮಿನಾರಾಯಣರೆಡ್ಡಿ, ಮುನಿವೆಂಕಟರೆಡ್ಡಿ, ಶಂಕರಪ್ಪ, ಚೌಡರೆಡ್ಡಿ, ರತ್ನಮ್ಮ, ಅನಸೂಯಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಗೌರಿಬಿದನೂರು ವರದಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಸಿಪಿಎಂ ಪಕ್ಷದ ಕಾರ್ಯಕರ್ತರು ಸೋಮವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಿಪಿಎಂ ಪಕ್ಷದ ತಾಲ್ಲೂಕು ಘಟಕದ ಕಾರ್ಯದರ್ಶಿ ಸಿ.ಸಿ. ಅಶ್ವತ್ಥಪ್ಪ ಮಾತನಾಡಿ ‘ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ  ಬಂದ ಸಂದರ್ಭದಲ್ಲಿ ಜನತೆಗೆ ನೀಡಿದ ಆಶ್ವಾಸನೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ’ ಎಂದು ದೂರಿದರು.

‘ಆಹಾರ ಧಾನ್ಯಗಳ ಬೆಲೆ ಪ್ರಮುಖವಾಗಿ ಬೇಳೆ ಕಾಳುಗಳ ಹಿಂದಿನ ಯುಪಿಎ ಸರ್ಕಾರಕ್ಕಿಂತ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಶೇ 140 ರಷ್ಟು ಏರಿಕೆಯಾಗಿ ಜನರು ಜೀವನ ನಡೆಸಲು ದುಸ್ತರವಾಗಿದೆ. ಅವಶ್ಯಕ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯ ಮೂಲಕ ವಿತರಿಸಬೇಕು’ ಎಂದು ಒತ್ತಾಯಿಸಿದರು. 

     ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಆರ್.ಎನ್. ರಾಜು,ಅನ್ವರ ಬಾಷ, ಮಂಜುನಾಥ್, ಗಂಗಾಧರಪ್ಪ,ವೆಂಕಟಸ್ವಾಮಿ, ಕೃಷ್ಣಪ್ಪ, ಲಕ್ಷ್ಮಿ ದೇವಮ್ಮ ಮತ್ತಿತರರು ಉಪಸ್ಥಿತರಿದ್ದರು.

ಗುಡಿಬಂಡೆ ವರದಿ:  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ, ಜನವಿರೋಧಿ ನೀತಿ ಖಂಡಿಸಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಸೋಮವಾರ ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಪಿಎಂ ಜಿಲ್ಲಾ ಮುಖಂಡ ಹಳೇಗುಡಿಬಂಡೆ ಲಕ್ಷ್ಮೀನಾರಾಯಣ ಮಾತನಾಡಿ, ‘ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಬೆಲೆ ನಿಯಂತ್ರಣ ಮಾಡಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಭರವಸೆ ಕೊಟ್ಟು ಮರೆತಿದೆ’ ಎಂದು ದೂರಿದರು.

ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕಡಿಮೆಯಿದ್ದರೂ ಸಹ ಇಲ್ಲಿನ ಸರ್ಕಾರಗಳು ದೊಡ್ಡ ಮಟ್ಟದಲ್ಲಿ ತೆರಿಗೆ ಮತ್ತು ಸೆಸ್ ಗಳನ್ನು ವಿಧಿಸುತ್ತಿರುವ ಪರಿಣಾಮ ಬೆಲೆಗಳು ಗಗನ ಮುಟ್ಟಿವೆ ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಹಾಗೂ ತಾಲ್ಲೂಕು ಸಿಪಿಎಂ ಕಾರ್ಯದರ್ಶಿ ಜಯರಾಮರೆಡ್ಡಿ ಮಾತನಾಡಿ, ‘ಕೇಂದ್ರ ಸರ್ಕಾರ ಆಹಾರ ಭದ್ರತೆ ಹಕ್ಕನ್ನು ಸಮಗ್ರವಾಗಿ ಜಾರಿ ಮಾಡುವಲ್ಲಿ ವಿಫಲವಾಗಿದೆ. ಪಡಿತರ ವ್ಯವಸ್ಥೆ ಮೂಲಕ ಅಗತ್ಯ ದಿನಬಳಕೆ ವಸ್ತುಗಳನ್ನು ವಿತರಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕಬಹುದಾಗಿದೆ. ಆಧಾರ್ ಸಂಖ್ಯೆ ಪಡಿತರ ಚೀಟಿಗೆ ಜೋಡಣೆ ಮಾಡುತ್ತಿರುವ ಕಾರಣ ಸಾವಿರಾರು ಬಡವರಿಗೆ ಆಹಾರ ಧಾನ್ಯಗಳು ಸಿಗುತ್ತಿಲ್ಲ. ಚುನಾವಣೆ ಪುರ್ವದಲ್ಲಿ ದೇಶದ ಜನರಿಗೆ ನೀಡಿದ ಭರಸವೆಗಳು ಹಾಗೆ ಉಳಿದಿವೆ. ಮೋದಿ ಸರ್ಕಾರದ ಜನವಿರೋಧಿ ನೀತಿಗಳಿಂದ ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆಗಳು ಉಂಟಾಗುತ್ತಿವೆ’ ಎಂದು ಆರೋಪಿಸಿದರು.

ತಹಶೀಲ್ದಾರ್ ಜಿ. ನಂಜಪ್ಪಗೆ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಿಪಿಎಂ ಪಕ್ಷದ ಕಾರ್ಯಕರ್ತರಾದ ಅಶ್ವತ್ಥ ರೆಡ್ಡಿ, ದೇವರಾಜು, ರಮಣ, ರಹಮತ್, ವೆಂಕಟರಾಮಯ್ಯ, ನಾಗರಾಜು, ಬಾಲಕೃಷ್ಣರೆಡ್ಡಿ, ಮುರುಳಿ, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT