ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಮತಗಳ ಎಣಿಕೆ ಶುಕ್ರವಾರ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.
ರಾಜ್ಯದ ಒಟ್ಟು 5,735 ಗ್ರಾಮ ಪಂಚಾಯಿತಿಗಳ 84,756 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಕಣದಲ್ಲಿದ್ದ 2,33,489 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.
‘ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಶುಕ್ರವಾರ ಸಂಜೆ 5 ಗಂಟೆ ವೇಳೆಗೆ ಮತ ಎಣಿಕೆ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ’ ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಶೇ 82.54 ಮತದಾನ: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 15 ಜಿಲ್ಲೆಗಳಲ್ಲಿ ಮಂಗಳವಾರ ಶೇಕಡಾ 82.54 ಮತದಾನ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ (ಶೇ 89.38) ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ (ಶೇ 73.62) ಮತದಾನ ನಡೆದಿದೆ.