ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪ್ತಿಯಾಗಿರುವ 1,800 ಟ್ಯಾಕ್ಸಿಗಳ ಬಿಡುಗಡೆಗೆ ಆಗ್ರಹ

ಸಾರಿಗೆ ಇಲಾಖೆ ವಿರುದ್ಧ ವಾಹನ ಚಾಲಕರ, ಮಾಲೀಕರ ಪ್ರತಿಭಟನೆ
Last Updated 27 ಮೇ 2016, 19:55 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿರುವ 1,800 ಟ್ಯಾಕ್ಸಿಗಳನ್ನು ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿ ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರು ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಉದ್ಯಾನದಲ್ಲಿ ಸೇರಿದ್ದ ಓಲಾ, ಉಬರ್‌, ಟ್ಯಾಕ್ಸಿ ಶ್ಯೂರ್‌ ಸೇರಿ ವಿವಿಧ ಕಂಪೆನಿ ಟ್ಯಾಕ್ಸಿಗಳ ಚಾಲಕರು ಹಾಗೂ ಮಾಲೀಕರು, ‘ನಿಯಮ ಉಲ್ಲಂಘನೆ ಹೆಸರಿನಲ್ಲಿ  ಸಾರಿಗೆ ಇಲಾಖೆ ಅಧಿಕಾರಿಗಳು ಟ್ಯಾಕ್ಸಿಗಳನ್ನು ಜಪ್ತಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಟ್ಯಾಕ್ಸಿ ಮಾಲೀಕ ಗಿರೀಶ್‌ ಮಾತನಾಡಿ, ‘ಕರ್ನಾಟಕ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಗಳು– 2016 ಅಡಿ ಟ್ಯಾಕ್ಸಿ ಸೇವೆಗೆ ಪರವಾನಗಿ ಪಡೆಯಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಅದು ಕಂಪೆನಿಗಳಿಗೆ ಮಾತ್ರ ಅನ್ವಯಿಸುತ್ತದೆ. ಆದರೆ ಅಧಿಕಾರಿಗಳು, ಕಂಪೆನಿ ಬದಲು ಅಮಾಯಕ ಚಾಲಕರು ಮತ್ತು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದು ಖಂಡನೀಯ’ ಎಂದು ಹೇಳಿದರು.

‘ಹಲವು ವರ್ಷಗಳಿಂದ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದೇವೆ. ಇತ್ತೀಚೆಗೆ ರಾಜಕೀಯ ಲಾಭಕ್ಕಾಗಿ ಸರ್ಕಾರ ನಿಯಮ ರೂಪಿಸಿ ದಬ್ಬಾಳಿಕೆ ನಡೆಸುತ್ತಿದೆ. ಇದುವರೆಗೂ 1,800 ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದು, ಲಕ್ಷಾಂತರ ರೂಪಾಯಿ ದಂಡ ವಸೂಲು ಮಾಡಿದ್ದಾರೆ’ ಎಂದು ಅವರು ದೂರಿದರು.

ಟ್ಯಾಕ್ಸಿ ಚಾಲಕ ನವೀನ್‌ ಮಾತನಾಡಿ, ‘ನಗರದಲ್ಲಿ 40 ಸಾವಿರ ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರಿದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳ ಕ್ರಮದಿಂದ ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ’ ಎಂದು ಹೇಳಿದರು.

ಕುಮಾರಸ್ವಾಮಿ ಭೇಟಿ: ಪ್ರತಿಭಟನಾ ಸ್ಥಳಕ್ಕೆ ಜೆಡಿಎಸ್‌್ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಅವರು ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ‘ಚಾಲಕರು, ಮಾಲೀಕರು ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಸಬೇಕು. ಬೇಡಿಕೆ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರ ಜತೆ ಮಾತನಾಡುತ್ತೇನೆ’ ಎಂದು ಹೇಳಿದರು.

ಮುಖ್ಯಾಂಶಗಳು
* ಬೇಡಿಕೆ ಈಡೇರದಿದ್ದರೆ ಗಂಭೀರ ಸ್ವರೂಪದ ಹೋರಾಟದ ಎಚ್ಚರಿಕೆ

* ಸಾರಿಗೆ ಇಲಾಖೆ ಅಧಿಕಾರಿಗಳಿಂದ ಬೇಕಾಬಿಟ್ಟಿ ದಂಡ ವಸೂಲಿ ಆರೋಪ
* ನಿಯಮ ಜಾರಿ ನೆಪದಲ್ಲಿ ಅಮಾಯಕರ ಮೇಲೆ ದಬ್ಬಾಳಿಕೆ ಆರೋಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT