ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಗಣತಿ ಸಮೀಕ್ಷೆ ಅಸಮರ್ಪಕ

Last Updated 21 ಏಪ್ರಿಲ್ 2015, 10:49 IST
ಅಕ್ಷರ ಗಾತ್ರ

ರಾಮನಗರ:  ಜಿಲ್ಲೆಯಲ್ಲಿ ಇದೇ ತಿಂಗಳ 11 ರಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಜಿಲ್ಲಾಧಿಕಾರಿ ಎಫ್‌.ಆರ್. ಜಮಾದಾರ್ ಅವರು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ರಂಗೇಗೌಡ ಅವರನ್ನು ತರಾಟೆಗೆ ತೆಗೆದುಕೊಂಡರು.

ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರು ಏ.23ರಂದು ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಪ್ರತಿ ದಿನ ಭರ್ತಿ ಮಾಡಿದ ಗಣತಿ ಸಮೀಕ್ಷೆಯ ನಮೂನೆಗಳ ಮಾಹಿತಿಯನ್ನು ಗಣಕೀಕರಣಗೊಳಿಸಲು ತಾಲ್ಲೂಕು ಕೇಂದ್ರಗಳಲ್ಲಿ 'ಡಾಟಾ ಎಂಟ್ರಿ' ಕೇಂದ್ರಗಳನ್ನು ತೆರೆಯಲಾಗಿದೆ. ಆಯಾ ದಿನದ ಸಮೀಕ್ಷೆಯ ಮಾಹಿತಿಯನ್ನು ಅಂದೇ  ಕಂಪ್ಯೂಟರ್‌ನಲ್ಲಿ ಭರ್ತಿ ಮಾಡಬೇಕು. ಆದರೆ ಜಿಲ್ಲೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಸರಿಯಾಗಿ ಕಂಪ್ಯೂಟರ್‌ನಲ್ಲಿ ದಾಖಲಿಸುತ್ತಿಲ್ಲ‌ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿದಿನ ಸಂಗ್ರಹಿಸಿದ ಮಾಹಿತಿಯನ್ನು ಅಂದು ಸಂಜೆ ಕಂಪ್ಯೂರ್‌ನಲ್ಲಿ  ದಾಖಲಿಸದೆ ಇರುವುದರಿಂದ ರಾಜ್ಯದಲ್ಲಿ ಸಮೀಕ್ಷೆಯ ಕಾರ್ಯದಲ್ಲಿ ರಾಮನಗರ ಜಿಲ್ಲೆ ಹಿಂದುಳಿದಿದೆ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಪ್ರತಿದಿನ ಮಾಹಿತಿ ಸಂಗ್ರಹಿಸಿ ಅದನ್ನು ಕಂಪ್ಯೂಟರ್‌ನಲ್ಲಿ ದಾಖಲಿಸದಿದ್ದರೆ ಅನುಕೂಲವೇನು? ಕಂಪ್ಯೂಟರ್‌ನಲ್ಲಿ ದಾಖಲಿಸುವುದರಿಂದ ಉನ್ನತ ಅಧಿಕಾರಿಗಳು ಅಲ್ಲಿಯೇ ಇಲ್ಲಿನ ಮಾಹಿತಿಯನ್ನು ತಿಳಿದುಕೊಳ್ಳುತ್ತಾರೆ ಎಂದು ಸೂಚಿಸಿದ್ದರು.

ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ  ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಮಾತನಾಡಿ ಇದೇ ತಿಂಗಳ 11 ರಿಂದ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಇತರೆ ಜಿಲ್ಲೆಗಳಲ್ಲಿ ಇಲ್ಲಿಯವರೆಗೆ 40 ಸಾವಿರಕ್ಕೂ ಹೆಚ್ಚು ಗಣತಿಯಾಗಿದ್ದರೆ, ರಾಮನಗರ ಜಿಲ್ಲೆಯಲ್ಲಿ ಕೇವಲ 1,189 ಜನರ ಗಣತಿ ಮಾತ್ರ ಆಗಿದೆ.
ಬೆಂಗಳೂರಿಗೆ ರಾಮನಗರ ಜಿಲ್ಲೆಯು ಸಮೀಪವಿದೆ. ಗಣತಿ ಕೆಲಸಕ್ಕಾಗಿ ತರಬೇತಿ ನೀಡಿ ಸೂಕ್ತ ಸಿಬ್ಬಂದಿಯನ್ನು ನೀಡಿದ್ದರೂ ಗಣತಿ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಇನ್ನು ಮುಂದಾದರೂ ಗಣತಿ ಕಾರ್ಯ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

23ರಂದು ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ :  ಪೂರ್ವಭಾವಿ ಸಭೆಗೆ ಬರುವ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಬರಬೇಕು. ಆದರೆ ಸಭೆಗೆ ಬರುವ ಅಧಿಕಾರಿಗಳ ಹತ್ತಿರ ಮಾಹಿತಿಯೂ ಇರುವುದಿಲ್ಲ, ಸಭೆಯಲ್ಲಿ ಹೇಳುವ ವಿಷಯವನ್ನು ಗಮನವಿಟ್ಟು ಕೇಳುವುದಿಲ್ಲ ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಬೇಸರ ವ್ಯಕ್ತಪಡಿಸಿದರು.

ಇದೇ ತಿಂಗಳ 23 ರಂದು ಲೋಕಾಯುಕ್ತ ನ್ಯಾಯಮೂರ್ತಿ ಡಾ. ವೈ. ಭಾಸ್ಕರ್ ರಾವ್ ಅವರು ರಾಮನಗರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಜಿಲ್ಲೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಂದ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ ಕುರಿತು ಚರ್ಚಿಸಲು ಆಗಮಿಸುತ್ತಿದ್ದಾರೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಡಾ. ವೈ. ಭಾಸ್ಕರ್‌ ರಾವ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಆದ್ದರಿಂದ ಸಭೆಗೆ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಅಧಿಕಾರಿಗಳು ತಪ್ಪದೆ ಹಾಜರಾಗಬೇಕು ಎಂದು ಸೂಚಿಸಿದರು.

ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಸಂಪೂರ್ಣ ಮಾಹಿತಿಯೊಂದಿಗೆ ನಿಗದಿತ ನಮೂನೆಯಲ್ಲಿ ತಯಾರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸಲ್ಲಿಸದಿದ್ದರೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದರು. ಆದ್ದರಿಂದ ಅಧಿಕಾರಿಗಳು ಸೂಕ್ತ ಮಾಹಿತಿಯನ್ನು ಒದಗಿಸಬೇಕು. ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಧನುಷ್, ಉಪಕಾರ್ಯದರ್ಶಿ ಲತಾ, ಡಿವೈಎಸ್ಪಿ ಕೆ. ಲಕ್ಷ್ಮಿಗಣೇಶ್, ಉಪವಿಭಾಗಾಧಿಕಾರಿ ಡಾ.ಎಂ.ಎನ್. ರಾಜೇಂದ್ರಪ್ರಸಾದ್, ತಹಶೀಲ್ದಾರ್ ಎಚ್.ಟಿ. ಮಂಜಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT