ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ಬಂದ್‌ ವಿರೋಧಿಸಿ ಪ್ರತಿಭಟನೆ

ಮೇಕೆದಾಟು ಅಣೆಕಟ್ಟೆ ಯೋಜನೆಗೆ ಆಕ್ಷೇಪಣೆ: ಆಕ್ರೋಶ
Last Updated 28 ಮಾರ್ಚ್ 2015, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ನಗರದ ಹಲವೆಡೆ ಶನಿವಾರ ಪ್ರತಿಭಟನೆ ನಡೆಸಿದರು.

ಕನ್ನಡ ಚಳವಳಿ ವಾಟಾಳ್ ಪಕ್ಷ  ಕಾರ್ಯಕರ್ತರು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪನ್ನೀರ್‌ ಸೆಲ್ವಂ ಹಾಗೂ ಜಯಲಲಿತಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ‘ಸುಪ್ರೀಂಕೋರ್ಟ್ ತೀರ್ಪಿನಂತೆ 192 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟು ಉಳಿದ ನೀರಿನಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆ ಯೋಜನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ಇದಕ್ಕೆ ತಮಿಳುನಾಡು ಅಡ್ಡಿಪಡಿಸುತ್ತಿದೆ. ತಮಿಳುನಾಡು ಪದೇ ಪದೇ ರಾಜ್ಯದ ವಿಷಯಗಳಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತದೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಕಿಡಿ ಕಾರಿದರು. ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಆನಂದರಾವ್ ವೃತ್ತದಲ್ಲಿ ತಮಿಳುನಾಡು ಮುಖ್ಯಮಂತ್ರಿ ಪನ್ನೀರ್‌ ಸೆಲ್ವಂ ಹಾಗೂ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಣಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿದರು.

‘ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ರಾಜ್ಯದ ಕೆಲವು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ. ಹೀಗಾಗಿ ಸರ್ಕಾರ‌ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪುರಭವನದ ಬಳಿ ಪ್ರತಿಭಟನೆ ಮಾಡಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ತಮಿಳುನಾಡಿನಲ್ಲಿ ಬಂದ್‌ ಆಚರಿಸಿದ್ದನ್ನು ವಿರೋಧಿಸಿ ಅತ್ತಿಬೆಲೆಯಿಂದ  ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಹೊಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ಮಾಡಿದ ಅವರು, ತಮಿಳುನಾಡು ಗಡಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ತಮಿಳುನಾಡು ಗಡಿಗೆ ಮುತ್ತಿಗೆ ಮಾಡಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಸಂಜೆ ವೇಳೆಗೆ ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT