ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಕೂಲಿ ಪಾವತಿಸಲು ವಿಳಂಬ ಬೇಡ

ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
Last Updated 26 ಜುಲೈ 2016, 10:02 IST
ಅಕ್ಷರ ಗಾತ್ರ

ತುಮಕೂರು: ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕರಿಗೆ ನಿಗದಿತ ಅವಧಿಯೊಳಗೆ ಕೂಲಿ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್‌ ಸೋಮವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಕಾರ್ಮಿಕರು ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಿದ್ದರೂ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಹಣ ನೀಡಲು ಏನು ಕಷ್ಟ ಎಂದು ಪ್ರಶ್ನಿಸಿದರು.

ಕಾರ್ಮಿಕರ ಸಮಸ್ಯೆ ಕುರಿತು ಪಾವಗಡ ಮತ್ತು ಕುಣಿಗಲ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಆದಷ್ಟು ಬೇಗ ಕೂಲಿ ಪಾವತಿಸಿ. ಇಲ್ಲವಾದರೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಾಂತಾರಾಮ್‌ ಮಾತನಾಡಿ, ಕೂಲಿ ಹಣವನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒಗಳು ನಿಗದಿತ ಅವಧಿಯಲ್ಲಿ ಪಾವತಿ ಮಾಡಬೇಕು ಎಂದು ಹೇಳಿದರು.

ಸಮನ್ವಯದಿಂದ ಕೆಲಸ ಮಾಡಿ: ಮುಖ್ಯಮಂತ್ರಿ ಸೂಚನೆಯಂತೆ ಪ್ರತಿ ತಿಂಗಳು ಜಿಲ್ಲೆಯ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್‌ ತಿಳಿಸಿದರು.

ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ವಾಟ್ಸಪ್‌, ಇ–ಮೇಲ್‌ ಹಾಗೂ ಮತ್ತಿತರ ಸಾಮಾಜಿಕ ತಾಣಗಳ ಮೂಲಕ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಂತರ್ ಇಲಾಖೆ ಕೆಲಸಗಳನ್ನು ಪರಸ್ಪರ ಪೂರ್ಣಗೊಳಿಸಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಅನಿತಾ, ಉಪವಿಭಾಗಾಧಿಕಾರಿಗಳಾದ ಅನಿತ ಲಕ್ಷ್ಮಿ, ಪ್ರಜ್ಞಾ ಅಮ್ಮೆಂಬಳ, ತಬಸ್ಸುಮ್‌ ಜಹೇರಾ ಇತರರು ಭಾಗವಹಿಸಿದ್ದರು.

16 ಮಂದಿ ಬಲಿ
ಜಿಲ್ಲೆಯಲ್ಲಿ ಕೃಷಿ ಹೊಂಡಗಳಿಗೆ ಆಕಸ್ಮಿಕವಾಗಿ ಬಿದ್ದು ಇಲ್ಲಿವರೆಗೂ 16 ಮಂದಿ ಮೃತಪಟ್ಟಿದ್ದಾರೆ. ಇಂತಹ ಅವಘಡಗಳನ್ನು ತಪ್ಪಿಸಲು ಕೃಷಿ ಇಲಾಖೆ, ಕೃಷಿಹೊಂಡಗಳ ಸುತ್ತ ಹಗ್ಗಗಳನ್ನು ಹಾಕಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಾಂತಾರಾಮ್ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಆಶ್ರಯ ಯೋಜನೆಯಡಿ ಮನೆ ನಿರ್ಮಿಸುವ ಬಡವರಿಗೆ ಮರಳು ಲಭ್ಯವಾಗುತ್ತಿಲ್ಲ. ಹಾಗಾಗಿ ಎಂ–ಸ್ಯಾಂಡ್ ಮರಳನ್ನು ಆಶ್ರಯ ಯೋಜನೆ ಮನೆ ಹಾಗೂ ಸರ್ಕಾರಿ ನಿರ್ಮಾಣಗಳಿಗೆ ಕಡ್ಡಾಯವಾಗಿ ಬಳಸಿಕೊಳ್ಳಬೇಕು ಎಂದು  ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT