ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ: ಸಿದ್ದರಾಮಯ್ಯ

Last Updated 15 ಏಪ್ರಿಲ್ 2014, 9:11 IST
ಅಕ್ಷರ ಗಾತ್ರ

ಚಾಮರಾಜನಗರ: ‘ತಮ್ಮ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರ, ಲೈಂಗಿಕ ಪ್ರಕರಣಗಳು ಬೆಳಕಿಗೆ ಬಂದ ಪರಿಣಾಮ ಬಿಜೆಪಿ ನಾಯಕರು ಜನರ ಬಳಿಗೆ ಹೋಗಿ ಮತ ಕೇಳುವ ನೈತಿಕತೆ ಉಳಿಸಿಕೊಂಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ನಗರದಲ್ಲಿ ಸೋಮವಾರ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆರ್‌. ಧ್ರುವನಾರಾಯಣ ಅವರ ಪರವಾಗಿ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಬಿಜೆಪಿ ವರಿಷ್ಠರಲ್ಲಿ ನೈತಿಕ ಶಕ್ತಿ ಇಲ್ಲ. ಆತ್ಮಸ್ಥೈರ್ಯ ಕಳೆದುಕೊಂಡಿರುವ ಅವರು ನರೇಂದ್ರ ಮೋದಿ ಪ್ರಧಾನಿಯಾಗಲು ಮತ ನೀಡುವಂತೆ ಕೇಳುತ್ತಿದ್ದಾರೆ ಎಂದು ಟೀಕಿಸಿದರು.

ಜೆಡಿಎಸ್‌ನದು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಹ ಸ್ಥಿತಿಯಾಗಿದೆ. ದೇವೇಗೌಡರು ಬಂದು ಅತ್ತರೂ ಆ ಪಕ್ಷಕ್ಕೆ ಮತ ನೀಡಬೇಡಿ. ಜೆಡಿಎಸ್‌ಗೆ ಓಟು ನೀಡಿದರೆ ಪರೋಕ್ಷವಾಗಿ ಬಿಜೆಪಿಯನ್ನು ಬೆಂಬಲಿಸಿದಂತಾಗುತ್ತದೆ ಎಂದ ಅವರು, ಸಂಸದ ಆರ್‌. ಧ್ರುವನಾರಾಯಣ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರನ್ನು ಮತ್ತೆ ಸಂಸತ್‌ಗೆ ಆಯ್ಕೆ ಮಾಡಿ ಕಳುಹಿಸಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ಅವರು ಗೆಲ್ಲುತ್ತಾರೆಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ಗುಜರಾತ್‌ ಮಾದರಿಯೇ ಹಾಸ್ಯಾಸ್ಪದ. ಶಿಶು ಮರಣ ಪ್ರಮಾಣದಲ್ಲಿ ಆ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಅಲ್ಲಿನ ಶೇ 55ರಷ್ಟು ಹೆಣ್ಣುಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದರೆ, ಗುಜರಾತ್‌ ಹೆಣ್ಣುಮಕ್ಕಳಿಗೆ ಸೌಂದರ್ಯ ಪ್ರಜ್ಞೆ ಹೆಚ್ಚಿದ್ದು, ಡಯಟ್‌ ಮಾಡುತ್ತಿದ್ದಾರೆ ಎಂದು ನರೇಂದ್ರ ಮೋದಿ ಹೇಳುತ್ತಾರೆ.

ಅವರ ಹೇಳಿಕೆ ನಗು ತರಿಸುತ್ತದೆ ಎಂದರು. ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್‌ ಮಾತನಾಡಿ, ‘ಕಾಂಗ್ರೆಸ್‌ನಲ್ಲಿ ದಲಿತರಿಗೆ ಹೆಚ್ಚಿನ ಸ್ಥಾನಮಾನ ಕಲ್ಪಿಸಲಾಗಿದೆ. ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡಬಾರದು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT