ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ವಿವಿಧೆಡೆ ಸಾಧಾರಣ ಮಳೆ ಜಲಾಶಯಗಳಿಗೆ ಒಳಹರಿವು ಹೆಚ್ಚಳ

Last Updated 20 ಜುಲೈ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ವಿವಿಧ ಜಲಾಶಯಗಳ ಒಳಹರಿವಿನಲ್ಲೂ ಕೊಂಚ ಏರಿಕೆಯಾಗಿದೆ. ಆದರೆ ಆಲಮಟ್ಟಿ ಜಲಾಶಯದ ಒಳಹರಿವಿನಲ್ಲಿ ಇಳಿಮುಖವಾಗಿದೆ. ಜಲಾಶಯಕ್ಕೆ 15 ಸಾವಿರ ಕ್ಯುಸೆಕ್ ಒಳಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಜತೆಗೆ  ನಾಲೆಗಳ ಮೂಲಕ 420 ಕ್ಯುಸೆಕ್ ನೀರನ್ನು ಬಿಡಲಾಗುತ್ತಿದೆ.

ಕಾವೇರಿ ಕಣಿವೆಯಲ್ಲಿ ಬುಧವಾರ ಸಾಧಾರಣ ಮಳೆಯಾಗಿದ್ದು, ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಳವಾಗಿದೆ.
ಕೊಡಗು ಜಿಲ್ಲೆಯ ನಾಪೋಕ್ಲು, ಭಾಗಮಂಡಲ ವ್ಯಾಪ್ತಿಯಲ್ಲಿ ತುಂತುರು ಮಳೆಯಾಗಿದೆ. ವಿರಾಜಪೇಟೆ, ಸಿದ್ದಾಪುರ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಹಾಸನ ಜಿಲ್ಲೆಯ ಕೆಲವೆಡೆ ಜಿಟಿಜಿಟಿ ಮಳೆಯಾಗಿದೆ.

ಸಾಧಾರಣ ಮಳೆ: ಶಿವಮೊಗ್ಗ ಜಿಲ್ಲೆಯ ಸಾಗರ, ಭದ್ರಾವತಿ, ಹೊಸನಗರ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಬುಧವಾರ ಸಾಧಾರಣ ಪ್ರಮಾಣದ ಮಳೆ ಸುರಿದಿದೆ.

ಚಿತ್ರದುರ್ಗ ನಗರದಲ್ಲಿ ಬುಧವಾರ ಸುಮಾರು ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಸುರಿದ ಹಿನ್ನೆಲೆಯಲ್ಲಿ ಬಿ.ಡಿ.ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳ ಮಾರ್ಗಗಳಲ್ಲಿ ಸಂಪೂರ್ಣ ಟ್ರಾಫಿಕ್ ಕಿರಿಕಿರಿ ಉಂಟಾಯಿತು.

ಜಿಲ್ಲೆಯ ಹಿರಿಯೂರು, ಹೊಳಲ್ಕೆರೆ, ಚಿತ್ರದುರ್ಗ ತಾಲ್ಲೂಕಿನ ತುರುವನೂರು ಸೇರಿದಂತೆ ಇತರೆಡೆಗಳಲ್ಲಿ ಹದ ಮಳೆಯಾಗಿದೆ.
ದಾವಣಗೆರೆ ನಗರದಲ್ಲಿ ಮಧ್ಯಾಹ್ನದಿಂದ ಸಂಜೆಯವರೆಗೆ ಮಳೆಯಾಗಿದ್ದು, ಪಿ.ಬಿ. ರಸ್ತೆಯಲ್ಲಿ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು. ಚನ್ನಗಿರಿಯಲ್ಲೂ ಮಳೆಯಾಯಿತು.

ವ್ಯಾಪಕ ಮಳೆ: ಬಳ್ಳಾರಿ, ವಿಜಯಪುರ,  ಹಾವೇರಿ, ಉತ್ತರ ಕನ್ನಡ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬುಧವಾರ ವ್ಯಾಪಕವಾಗಿ ಮಳೆಯಾಗಿದೆ.
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ   ಇಳಿಮುಖವಾಗಿದ್ದು, ಕೃಷ್ಣಾ ಮತ್ತು ಇತರ ನದಿಗಳಲ್ಲಿ ಉಂಟಾಗಿದ್ದ ಪ್ರವಾಹವು ಕಡಿಮಯಾಗಿದೆ.
ಬೆಳಗಾವ ಮತ್ತು ಬಾಗಲಕೋಟೆ ಧಾರವಾಡ ನಗರದಲ್ಲಿ ಮಧ್ಯಾಹ್ನ ಸುಮಾರು ಎರಡು ತಾಸು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ, ಹುಬ್ಬಳ್ಳಿ ನಗರದಲ್ಲಿ ಸುಮಾರು ಅರ್ಧ ತಾಸು ಬಿರುಸಿನ ಮಳೆಯಾಗಿದೆ. ಉಳಿದೆಡೆ ಜಿಟಿ ಜಿಟಿ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಚುರುಕುಗೊಂಡಿದೆ.

ಮತ್ತೂ ಮೂರು ದಿನ ಮಳೆ

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು  ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದೆ.
ಚಿಂಚೋಳಿ, ಸೂಳೆಪೇಟೆ 7, ಕೊಲ್ಲೂರು 5, ದಾಬ್ಕಾ, ಜೇವರ್ಗಿ, ಹುಲಿಕಲ್‌್ಲಿ  4, ಕಾರವಾರ, ಗೇರುಸೊಪ್ಪ, ಕದ್ರಾ, ಔರಾದ್, ಕಲಬುರ್ಗಿ,  ಭೀಮರಾಯನಗುಡಿ, ಸೈದಾಪುರ, ಆಗುಂಬೆ, ಬಸರಾಲುವಿನಲ್ಲಿ 3 ಸೆಂ.ಮೀ ಮಳೆಯಾಗಿದೆ.
ಮುನ್ಸೂಚನೆ:  ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.
ಜುಲೈ 21 ರಿಂದ 23ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ  ಮತ್ತು ಉತ್ತರ ಒಳನಾಡಿನಲ್ಲಿ  ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT