ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಾಸ ಗಳಿಸಿ: ಬಿಎಸ್‌ವೈಗೆ ಸೂಚನೆ

ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ವರಿಷ್ಠರ ಕಾರ್ಯತಂತ್ರ
Last Updated 29 ಜೂನ್ 2016, 22:30 IST
ಅಕ್ಷರ ಗಾತ್ರ

ನವದೆಹಲಿ: ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಕಾರ್ಯವೈಖರಿಗೆ ಕೆಲವು ಮುಖಂಡರು ಬೇಸರ ವ್ಯಕ್ತಪಡಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್‌, ‘ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು’ ಎಂದು ಯಡಿಯೂರಪ್ಪ ಅವರಿಗೆ ಸೂಚಿಸಿದೆ.

‘ರಾಜ್ಯ ಘಟಕದ ಎಲ್ಲ ಪದಾಧಿಕಾರಿಗಳ ಸಭೆ ಕರೆದು ಅತೃಪ್ತಿಯನ್ನು ಶಮನಗೊಳಿಸಿ’ ಎಂದು ಹೈಕಮಾಂಡ್‌ ತಿಳಿಸಿದ್ದು, ಜುಲೈ 2ರಂದು ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರ ನೇಮಕದಲ್ಲಿ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಅನೇಕರು ದೂರಿದ್ದಾರೆ. ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸದಿದ್ದರೆ ಪಕ್ಷಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಕರ್ನಾಟಕ ಉಸ್ತುವಾರಿಯಾಗಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳಿಧರ ರಾವ್‌ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್‌ ಅವರನ್ನು ಬುಧವಾರ ಭೇಟಿ ಮಾಡಿರುವ ಕೆಲವು ಹಿರಿಯ ನಾಯಕರು, ಪಕ್ಷದಲ್ಲಿನ ಬೆಳವಣಿಗೆಗಳ ಕುರಿತು ಮನವರಿಕೆ ಮಾಡಿದ್ದಾರೆ. ಸರ್ವಾಧಿಕಾರಿ ಧೋರಣೆಯನ್ನು ತೋರದೆ, ಪಕ್ಷಕ್ಕೆ ಶ್ರಮಿಸಿರುವ ಎಲ್ಲರ ಮಾರ್ಗದರ್ಶನ, ಸಲಹೆ, ಸೂಚನೆ ಪರಿಗಣಿಸುವುದು ಅಗತ್ಯ ಎಂದು ಯಡಿಯೂರಪ್ಪ ಅವರಿಗೆ ತಿಳಿಸಲಾಗುವುದು ಎಂಬ ಭರವಸೆ ದೊರೆತಿದೆ ಎಂದು ಮೂಲಗಳು ಖಚಿತಪಡಿಸಿವೆ.

ಜಿಗಜಿಣಗಿಗೆ ಅವಕಾಶ ಕೋರಿಕೆ: ವಿಜಯಪುರ ಕ್ಷೇತ್ರದಿಂದ ಐದು ಬಾರಿ ಜಯಿಸಿರುವ ಸಂಸದ ರಮೇಶ ಜಿಗಜಿಣಗಿ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ದಲಿತ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಬಿಜೆಪಿ ಮುಖಂಡರು ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಜಯಿಸಿರುವ ಏಕೈಕ ಸಂಸದ ರಮೇಶ ಜಿಗಜಿಣಗಿ ಅವರು ದಲಿತ ಎಡಗೈ ಸಮುದಾಯಕ್ಕೆ ಸೇರಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯದಲ್ಲಿರುವ ಆ ಸಮುದಾಯಕ್ಕೆ ಪ್ರಾಧಾನ್ಯತೆ ನೀಡಬೇಕು ಎಂದು ಕೋರಲಾಗಿದೆ.

ರಾಜ್ಯದ ಮೂವರು ಸಂಸದರು ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ಸಚಿವ ಸಂಪುಟ ಪುನರ್‌ ರಚಿಸುವ ಸಾಧ್ಯತೆ ಇದೆ.

ಹೈಕಮಾಂಡ್‌ಗೆ ಮನವರಿಕೆ: ಈಶ್ವರಪ್ಪ
ಮೈಸೂರು:
ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕದಿಂದ ಕಾರ್ಯಕರ್ತರಲ್ಲಿ ಅತೃಪ್ತಿ ಮೂಡಿದ್ದು ಅವರೊಂದಿಗೆ ಸಭೆ ನಡೆಸಿ ಅಭಿಪ್ರಾಯ ಪಡೆದಿದ್ದೇನೆ. ಕೋರ್‌ ಕಮಿಟಿಯಲ್ಲಿ ಈ ಕುರಿತು ಚರ್ಚಿಸಿ ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ  ಕೆ.ಎಸ್.ಈಶ್ವರಪ್ಪ ಇಲ್ಲಿ ಬುಧವಾರ ಹೇಳಿದರು.

ಬಿ.ಎಸ್‌.ಯಡಿಯೂರಪ್ಪ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾದಾಗ ಎಲ್ಲರಿಗೂ ಸಂತಸವಾಗಿತ್ತು. ಆದರೆ, ಅವರು ಪಕ್ಷದ ಕೋರ್‌ ಕಮಿಟಿಯಲ್ಲಿ ಚರ್ಚಿಸದೆ ಏಕಪಕ್ಷೀಯವಾಗಿ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕ ಮಾಡಿರುವುದರಿಂದ ನಿಷ್ಠಾವಂತ ಕಾರ್ಯಕರ್ತರಿಗೆ ನೋವಾಗಿದೆ. ಆದಷ್ಟು ಶೀಘ್ರ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT