ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಾತಿ ಸಮೀಕ್ಷೆಗೆ ಶಿಕ್ಷಕರ ಬಳಕೆ ಸರಿಯಲ್ಲ’

Last Updated 27 ಏಪ್ರಿಲ್ 2015, 20:16 IST
ಅಕ್ಷರ ಗಾತ್ರ

ಬೆಂಗಳೂರು: ಯಾವುದೇ ಗೊತ್ತು ಗುರಿ ಇಲ್ಲದ ಜಾತಿ ಸಮೀಕ್ಷೆಗೆ ಸರ್ಕಾರ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ವೇದಿಕೆ ಏರ್ಪಡಿಸಿದ್ದ, ರಾಜ್ಯ ಪ್ರಶಸ್ತಿ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಡಿದರು.

‘ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಗೆ ಯಾವುದೇ ಸ್ಪಷ್ಟ ಉದ್ದೇಶವಿಲ್ಲ. ಅದು ಸಮೀಕ್ಷೆಯಾಗಿಯೇ ಉಳಿಯಲಿದೆ. ಇಂಥಹದ್ದಕ್ಕೆ ಶಿಕ್ಷಕರನ್ನು ಬಳಸಿಕೊಳ್ಳುವುದು ಸಮಂಜಸವಲ್ಲ. ಮಕ್ಕಳಿಗೆ ಶಿಕ್ಷಣ ನೀಡಿ, ಅವರ ಭವಿಷ್ಯಕ್ಕೆ ದಾರಿದೀಪವಾಗುವ ಜವಾಬ್ದಾರಿಯುತ ಪಾತ್ರ ಮಾತ್ರ ಶಿಕ್ಷಕರಿಗೆ ನೀಡಬೇಕು’ ಎಂದು ಅವರು ಹೇಳಿದರು.

‘ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಶಿಕ್ಷಣ ನೆರವಾಗುತ್ತಿಲ್ಲ. ಸರ್ಕಾರದ ಶಿಕ್ಷಣ ನೀತಿಯೂ ವಿದ್ಯಾರ್ಥಿಗಳಿಗೆ ಪೂರಕವಾಗಿಲ್ಲ. ಈ ಕಾಲದ ಪೋಷಕರೂ ಮಕ್ಕಳಿಗೆ ಸಂಸ್ಕಾರ ಕಲಿಸದಿರುವುದು ಸಮಾಜಕ್ಕೆ ಮಾರಕವಾಗುತ್ತಿದೆ. ದೇಶದಲ್ಲಿ ಸಮೃದ್ಧವಾಗಿರುವ ಮಾನವ ಸಂಪನ್ಮೂಲದ ಬಳಕೆ ಸರಿಯಾಗಿ ಆಗುತ್ತಿಲ್ಲ. ಶಿಕ್ಷಕರಿಂದ ಮಾತ್ರ ಈ ಸಮಸ್ಯೆ ನಿವಾರಿಸಲು ಸಾಧ್ಯ’ ಎಂದು ಅವರು ಹೇಳಿದರು.

‘ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಶಿಕ್ಷಕರ ದರ್ಶನ’ ಪುಸ್ತಕ ಬಿಡುಗಡೆ ಮಾಡಿದ  ವಿಧಾನ ಪರಿಷತ್ ಸದಸ್ಯ ಎನ್‌.ಎಸ್. ಬೋಸರಾಜು, ‘ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎಂಬುದು ಸರ್ಕಾರಕ್ಕೆ ಮನವರಿಕೆಯಾಗಿದೆ. ಶಿಕ್ಷಕ ಸಮುದಾಯದ ಸಮಸ್ಯೆಗಳನ್ನು ನಿವಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.

2014ನೇ ಸಾಲಿನಲ್ಲಿ ರಾಜ್ಯ ಪ್ರಶಸ್ತಿ ಪಡೆದ 32 ಹಾಗೂ ರಾಷ್ಟ್ರ ಪ್ರಶಸ್ತಿ ಪಡೆದ 14 ಶಿಕ್ಷಕರನ್ನು ಕಾರ್ಯಕ್ರಮದಲ್ಲಿ  ಸನ್ಮಾನಿಸಲಾಯಿತು. ಹಿಮಾಂಶು ಜ್ಯೋತಿ ಕಲಾಪೀಠದ ಅಧ್ಯಕ್ಷ ಡಾ. ಬಿ.ವಿ.ಎ.ರಾವ್, ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ವೇದಿಕೆಯ ಅಧ್ಯಕ್ಷ ಆರ್.ಎನ್.ರಂಗಪ್ಪ, ಗೌರವ ಕಾ್ಯದರ್ಶಿ ಪಿ.ಎಸ್.ಧರಣಿಪ್ಪನವರ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT