ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ದಿನದಲ್ಲಿ ಗೃಹಸಚಿವ ಜಿಲ್ಲೆಗೆ ಭೇಟಿ

ಬೆಂಗಳೂರಿನಲ್ಲಿ ಪ್ರತಿಭಟಿಸಿದ ಸಂಘಟನೆಗಳಿಗೆ ಭರವಸೆ
Last Updated 22 ಆಗಸ್ಟ್ 2014, 10:18 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪೊಲೀಸರ ಕಾರ್ಯವೈಖರಿ ವಿರುದ್ಧ ಬೆಂಗಳೂ­ರಿನಲ್ಲಿ ಆ. 19ರಂದು ನಡೆಸಲಾದ ರಾಜ್ಯಮಟ್ಟದ ಪ್ರತಿಭಟನೆಗೆ ರಾಜ್ಯ ಸರ್ಕಾರದಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಗೃಹಸಚಿವ ಕೆ.ಜೆ.ಜಾರ್ಜ್‌ ಅವರು 20 ದಿನಗಳೊಳಗೆ ಜಿಲ್ಲೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿ­ದ್ದಾರೆ ಎಂದು ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದರು.

ಜನಪರ ಹೋರಾಟಗಾರರನ್ನು ರೌಡಿಪಟ್ಟಿಗೆ ಸೇರಿಸುವುದು, ಅನಗತ್ಯ­ವಾಗಿ ಪ್ರಕರಣ ದಾಖಲಿಸುವುದು ಸೇರಿದಂತೆ ಇನ್ನಿತರ ಕಾರಣಗಳಿಗಾಗಿ ಪೊಲೀಸರಿಂದ ತೊಂದರೆ ಆಗುತ್ತಿ­ದೆಯೆಂದು ಆರೋಪಿಸಿ ಗೃಹಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿಲಾಗಿತ್ತು. ಆದರೆ ಅಲ್ಲಿ ಪೊಲೀಸರು ಅವಕಾಶ ನೀಡಲಿಲ್ಲ. ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ ನಮ್ಮೊಂದಿಗೆ ಸಚಿವರು ಭೇಟಿಯಾದರು ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಹವಾಲುಗಳನ್ನು ಆಲಿಸಿದ ಸಚಿವರು, ಜಿಲ್ಲೆಯ ಪೊಲೀಸ್‌ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು. ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿ ಪೊಲೀಸರು ಮತ್ತು ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವು ಎಂದು ಭರವಸೆ ನೀಡಿದರು ಎಂದು ಅವರು ತಿಳಿಸಿದರು.

ಚಿಕ್ಕಬಳ್ಳಾಪುರ ಬಂದ್‌ ವೇಳೆ ಟೈರ್‌ ಸುಟ್ಟಿದನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿ­ದ್ದಾರೆ. ಪ್ರತಿಭಟನೆ ಮಾಡಿದ್ದಕ್ಕೆಲ್ಲ ಪ್ರಕರಣಗಳನ್ನು ದಾಖಲಿಸಿಕೊಂಡು ಜನಪರ ಹೋರಾಟಗಳನ್ನು ದಮನ ಮಾಡುವ ಯತ್ನ ನಡೆದಿದೆ. ಜನಪರ ದನಿಯೆತ್ತದಂತೆ ವ್ಯವಸ್ಥಿತವಾಗಿ ಪ್ರಯತ್ನ ಮಾಡಲಾಗುತ್ತಿದೆ. ಇಂತಹ ಕೃತ್ಯಗಳಿಂದ ಪೊಲೀಸರು ಹೊರಬರಬೇಕು. ಹೋರಾಟಗಾರರು ಮತ್ತು ಜನರೊಂದಿಗೆ ಸ್ನೇಹಪರವಾಗಿ ಸ್ಪಂದಿ­ಸಬೇಕು. ಹೋರಾಟಗಾರರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ ಮುಖಂಡ ಕೆ.ಸಿ.ರಾಜಾಕಾಂತ್, ಅಂತರ್‌­ರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಕೆ.ಶ್ರೀನಿವಾಸ್‌, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಚನ್ನರಾಯಪ್ಪ, ಕನ್ನಡಪರ ಸಂಘ­ಟನೆಗಳ ಹೋರಾಟಗಾರರ ಅಗಲಗುರ್ಕಿ ಚಲಪತಿ, ಜಯಂತ್‌, ಜೀತ ವಿಮುಕ್ತಿ–ಕರ್ನಾಟಕ ಸಂಘಟನೆ ಸಂಚಾಲಕಿ ರತ್ನಮ್ಮ, ರಾಣಿ ಅಬ್ಬಕ್ಕ ಮಹಿಳಾ ವೇದಿಕೆ ಅಧ್ಯಕ್ಷೆ ಸುಷ್ಮಾ ಶ್ರೀನಿವಾಸ್‌ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT