ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ವಿಧಾನ ಪರಿಷತ್ತಿನ ಚುನಾವಣೆಗಳಿಗೆ ಅಣಿಯಾದ ವೇದಿಕೆ

Published 4 ಮೇ 2024, 4:46 IST
Last Updated 4 ಮೇ 2024, 4:46 IST
ಅಕ್ಷರ ಗಾತ್ರ

ಮಡಿಕೇರಿ: ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಚುನಾವಣಾ ಕಾರ್ಯಸೂಚಿಯನ್ನು ಹೊರಡಿಸಿದೆ.‌

ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರವು ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕು ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿವೆ.

ದಕ್ಷಿಣ ಶಿಕ್ಷಕರ ಕ್ಷೇತ್ರವು ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಗಳನ್ನು ಒಳಗೊಂಡಿದೆ.

ಈ ಚುನಾವಣೆಗಳಿಗೆ ಮೇ 9 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. 16 ನಾಮಪತ್ರ ಸಲ್ಲಿಸಲು ಕೊನೆಯ ದಿನ. 17ರಂದು ನಾಮಪತ್ರಗಳ ಪರಿಶೀಲನೆ, 20ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ಜೂನ್ 3ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರುತ್ತಾರೆ.

ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರದ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಅವರುಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.

ವಿಧಾನ ಪರಿಷತ್ತಿನ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಜಿಲ್ಲಾಧಿಕಾರಿಗಳು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಅವರುಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.

ಚುನಾವಣೆಗೆ ಸ್ಪರ್ಧಿಸಲಿಚ್ಛಿಸುವ ಅಭ್ಯರ್ಥಿಗಳು ಮೇ 9ರಿಂದ ಮೇ 16 ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಮೈಸೂರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಮೇ, 10 ರಿಂದ ಮೇ, 12 ರವರೆಗೆ ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ ಆಕ್ಟ್ ಮೇರೆಗೆ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಆ ದಿನಗಳಂದು ನಾಮಪತ್ರ ಸ್ವೀಕರಿಸಲಾಗುವುದಿಲ್ಲ.

ನಾಮಪತ್ರಗಳ ನಮೂನೆಗಳನ್ನು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಪಡೆಯಬಹುದು. ಈ ಚುನಾವಣೆಯ ಸಂಬಂಧದಲ್ಲಿ ಸ್ಪರ್ಧಿಸಲಿಚ್ಛಿಸುವವರು 1951ರ ಪ್ರಜಾ ಪ್ರಾತಿನಿಧ್ಯ ಅಧಿನಿಯಮದ 3 ನೇ ನಿಯಮದ ಪ್ರಕಾರ ಪ್ರತಿ ಅಭ್ಯರ್ಥಿಯ ನಾಮಪತ್ರದಲ್ಲಿ ಸಂಬಂಧಿಸಿದ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ಕನಿಷ್ಠ 10 ಮತದಾರರು ಪ್ರಸ್ತಾಪಕರಾಗಿ (ಪ್ರೊಪೋಸರ್) ಸಹಿ ಮಾಡಿರಬೇಕು. ಪ್ರತಿ ಅಭ್ಯರ್ಥಿ ₹ 10 ಸಾವಿರ ಠೇವಣಿ ಮಾಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ₹ 5 ಸಾವಿರ ಠೇವಣಿ ಮಾಡಬೇಕು. ಅಭ್ಯರ್ಥಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು.

ನಾಮಾಂಕನ ಪತ್ರಗಳನ್ನು ಚುನಾವಣಾಧಿಕಾರಿಗಳಾದ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಮಾತ್ರ ಸಲ್ಲಿಸಬೇಕು. ಅಭ್ಯರ್ಥಿಗಳು ಕೇಂದ್ರ ಚುನಾವಣಾ ಆಯೋಗವು ನಿಗದಿಪಡಿಸಿರುವ ನಮೂನೆಯಲ್ಲಿ ನಾಮಪತ್ರ ಮತ್ತು ನಿಗದಿಪಡಿಸಿದ ನಮೂನೆಗಳಲ್ಲಿ ನೋಟರಿಯವರಿಂದ ಪ್ರಮಾಣೀಕರಿಸಿದ ಪ್ರಮಾಣ ಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು.

ನಾಮಪತ್ರಗಳನ್ನು ಸಲ್ಲಿಸುವ ಅಭ್ಯರ್ಥಿಗಳು ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಲು ಇಚ್ಛಿಸುವ ಸಂಬಂಧದಲ್ಲಿ ಆಯೋಗ ನಿಗದಿಪಡಿಸಿರುವ ಪತ್ರ ಎಎ, ಬಿಬಿ ಗಳನ್ನು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾದ ಮೇ 16 ರ ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.

ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಅಭ್ಯರ್ಥಿ ಹಾಗೂ ಇತರೆ 4 ಜನ, ಅಂದರೆ ಅವರ ಸೂಚಕರು ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT