ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJP ದಾಖಲಿಸಿರುವ ಮಾನನಷ್ಟ ಮೊಕದ್ದಮೆ: ಸಿದ್ದರಾಮಯ್ಯ, ಡಿಕೆಶಿ ಹಾಜರಿಗೆ ಕಾಲಾವಕಾಶ

Published 1 ಮೇ 2024, 13:53 IST
Last Updated 1 ಮೇ 2024, 13:53 IST
ಅಕ್ಷರ ಗಾತ್ರ

ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೂನ್‌ 1ರಂದು ಹಾಜರಾಗಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಲಾವಕಾಶ ನೀಡಿದೆ.

ಈ ಸಂಬಂಧ ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌.ಕೇಶವಪ್ರಸಾದ್‌ ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶೆ ಜೆ.ಪ್ರೀತ್‌ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು, ‘ಚುನಾವಣೆಯ ನಿಮಿತ್ತ ನಮ್ಮ ಅರ್ಜಿದಾರರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಜೂನ್ 1ಕ್ಕೆ ಹಾಜರಾಗುವಂತೆ ಆದೇಶಿಸಿ ವಿಚಾರಣೆ ಮುಂದೂಡಿದರು. ಈ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯವರೂ ಆರೋಪಿಯಾಗಿದ್ದು, ಅವರೂ ಜೂನ್‌ 1ರಂದು ಹಾಜರಾಗುವಂತೆ ಈಗಾಗಲೇ ಸಮನ್ಸ್‌ ಜಾರಿಗೊಳಿಸಲಾಗಿದೆ.  ದೂರುದಾರರ ಪರ ಹೈಕೋರ್ಟ್‌ ವಕೀಲ ಎಂ.ವಿನೋದ್‌ ಕುಮಾರ್‌ ಹಾಜರಿದ್ದರು.

ಪ್ರಕರಣವೇನು?: ‘2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್‌ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ₹1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ’ ಎಂದು ಆರೋಪಿಸಿದ್ದರು. ‘ಈ ಆರೋಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ’ ಎಂದು ಈ ಖಾಸಗಿ ದೂರು ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT