ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ 75 ದಾಖಲೆ ರಹಿತ ಗ್ರಾಮಗಳು

Last Updated 28 ಸೆಪ್ಟೆಂಬರ್ 2016, 10:25 IST
ಅಕ್ಷರ ಗಾತ್ರ

ಕೋಲಾರ: ‘ದಾಖಲೆರಹಿತ (ಮಜರೆ) ಗ್ರಾಮಗಳನ್ನು ಗುರುತಿಸಿ ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ’ ಎಂದು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡ ಆಯೋಗದ ಅಧ್ಯಕ್ಷ ಶಿವಮೂರ್ತಿ ತಿಳಿಸಿದರು.

ನಗರದಲ್ಲಿ ಮಂಗಳವಾರ ನಡೆದ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾತಿವಾರು ಸಮೀಕ್ಷೆ ನಡೆಸಿದ ಮೇಲೆ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸಮಾನತೆಯ ಸೌಕರ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಅದೇ ರೀತಿ ದಾಖಲೆರಹಿತ ಗ್ರಾಮಗಳಲ್ಲಿ ವಾಸವಿರುವ ಸಾರ್ವಜನಿಕರಿಗೂ ಸಮಾನ ಸೌಕರ್ಯ ನೀಡಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ ಮಾತನಾಡಿ, ‘ಜಿಲ್ಲೆಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ 75 ದಾಖಲೆರಹಿತ ಗ್ರಾಮಗಳು ಪತ್ತೆಯಾಗಿವೆ. ಈ ಬಗ್ಗೆ ಸರ್ಕಾರಕ್ಕೆ  ವರದಿ ಸಲ್ಲಿಸಲಾಗಿದೆ. ಆ ಗ್ರಾಮಗಳಿಗೆ ಸ್ಥಳೀಯ ಗ್ರಾಮ ಪಂಚಾಯಿತಿಗಳ ಮೂಲಕ ಸೌಕರ್ಯ ಕಲ್ಪಿಸಲಾಗುತ್ತಿದೆ’ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿವಮೂರ್ತಿ, ‘ರಾಜ್ಯದಲ್ಲಿ ಒಟ್ಟು 58 ಸಾವಿರ ದಾಖಲೆರಹಿತ ಗ್ರಾಮಗಳು ಮತ್ತು 19 ಲಕ್ಷ ಅರಣ್ಯ ಗ್ರಾಮಗಳನ್ನು ಗುರುತಿಸಲಾಗಿದೆ. ಹರಿಜನ, ಗಿರಿಜನ, ಬುಡಗ ಜಂಗಮ, ಆದಿವಾಸಿಗಳು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಇವರಿಗೆ ಸರ್ಕಾರದಿಂದ ಬಿಡುಗಡೆಯಾದ ಯಾವುದೇ ಯೋಜನೆಗಳು ತಲುಪದ ಕಾರಣ ಸಬಲೀಕರಣ ಸಾಧ್ಯವಾಗಿಲ್ಲ’ ಎಂದು ಅಭಿಪ್ರಾಯಪಟ್ಟರು.

ದಾಖಲೆರಹಿತ ಮತ್ತು ಅರಣ್ಯ ಗ್ರಾಮಗಳನ್ನು ಗುರುತಿಸಿ ಅಲ್ಲಿನ ನಿವಾಸಿಗಳ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಬೇಕು. ಜತೆಗೆ ಅವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉತ್ತೇಜನ ನೀಡಬೇಕು. ಅರಣ್ಯ ಗ್ರಾಮಗಳಲ್ಲಿನ ಜನರಿಗೆ ಸಾಮಾನ್ಯ ಜ್ಞಾನದ ಅರಿವು ಮೂಡಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಕರೆತರಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಉಪ ವಿಭಾಗಾಧಿಕಾರಿ ಸಿ.ಎನ್.ಮಂಜುನಾಥ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT