ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹ ತಡೆಯಲು ಮುಂದಾಗಿ

ಆಶಾ ಕಾರ್ಯಕರ್ತೆಯರ ತರಬೇತಿ ಕಾರ್ಯಾಗಾರದಲ್ಲಿ ಪುಟ್ಟರಂಗಶೆಟ್ಟಿ ಸಲಹೆ
Last Updated 30 ಡಿಸೆಂಬರ್ 2016, 9:20 IST
ಅಕ್ಷರ ಗಾತ್ರ

ಚಾಮರಾಜನಗರ: ‘ಬಾಲ್ಯ ವಿವಾಹದಿಂದ ಮಕ್ಕಳ ಮೇಲೆ ದೈಹಿಕ, ಸಾಮಾಜಿಕ ಹಾಗೂ ಮಾನಸಿಕವಾಗಿ ದುಷ್ಪರಿಣಾಮಗಳು ಬೀರುತ್ತಿದ್ದು, ಇಂಥಹ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಆಶಾ ಕಾರ್ಯಕರ್ತೆಯರು ಮುಂದಾಗ ಬೇಕು’ ಎಂದು ಶಾಸಕ ಸಿ.ಪುಟ್ಟರಂಗ ಶೆಟ್ಟಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ರುವ ನೂತನ ಕೆಡಿಪಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಉಷಾ ಕಾರ್ಯಕ್ರಮದಡಿ ನಡೆದ ಆಶಾ ಕಾರ್ಯಕರ್ತೆಯರಿಗೆ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಬಾಲ್ಯ ವಿವಾಹ ಪದ್ಧತಿಯಿಂದ ಹೆಣ್ಣುಮಕ್ಕಳ ಭವಿಷ್ಯದ ಮೇಲೆ ಹೆಚ್ಚಿನ ದುಷ್ಟಪರಿಣಾಮ ಬೀರುತ್ತಿದೆ. ಜಿಲ್ಲೆಯಲ್ಲಿ ಇಂದಿಗೂ ಬಾಲ್ಯವಿವಾಹ ನಡೆಯುತ್ತಿದೆ. ಇದಕ್ಕೆ ಮುಖ್ಯ ಕಾರಣ ಪೋಷಕರಲ್ಲಿನ ಮೌಢ್ಯತೆ ಹಾಗೂ ಅನಕ್ಷರತೆಯಾಗಿದೆ. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಜನ ರಲ್ಲಿ ಅರಿವು ಮೂಡಿಸಬೇಕು. ಮಕ್ಕಳಿಗೆ ಶಿಕ್ಷಣ ಕೊಡಿಸುವಂತೆ ಉತ್ತೇಜಿಸಬೇಕು ಎಂದು ಸಲಹೆ ನೀಡಿದರು.

ಆಶಾ ಕಾರ್ಯಕರ್ತೆಯರು ಸಮಾಜ ಕ್ಕಾಗಿ ದುಡಿಯಬೇಕು. ಗರ್ಭೀಣಿಯರಿಗೆ, ವೃದ್ಧರಿಗೆ ಸ್ವಚ್ಛತೆಯ ಅರಿವು ಮೂಡಿಸ ಬೇಕು. ರಸ್ತೆಬದಿಯಲ್ಲಿ ಮಲ ವಿಸರ್ಜನೆ ಮಾಡದೇ ಶೌಚಾಲಯ ಹೊಂದುವಂತೆ ಮನವೊಲಿಸಬೇಕು. ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ, ಆಶಾ ಕಾರ್ಯಕರ್ತೆಯರು ಮಹಿಳೆಯರ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ ತಡೆಗೆ ಮುಂದಾಗಬೇಕು. ಬಾಲ್ಯ ವಿವಾಹ ಮಾಡುವುದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ವರದಕ್ಷಿಣೆ, ಕೌಟುಂಬಿಕ ಕಲಹ ಹಾಗೂ ಕುಟುಂಬದ ಸದಸ್ಯರ ದುಶ್ಚಟ ಗಳಿಂದ ಮಹಿಳೆಯರ ಮೇಲೆ ಹೆಚ್ಚಿನ ದೌರ್ಜನ್ಯಗಳು ನಡೆಯುತ್ತಿವೆ. ಇಂಥಹ ಪ್ರಕರಣಗಳು ಕಂಡುಬಂದಾಗ ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಅವರಿಗೆ ಸಹಾಯ ಮಾಡಬೇಕು ಎಂದರು.

ಹೆಣ್ಣುಮಕ್ಕಳು ಧೈರ್ಯವಾಗಿ ಮುನ್ನುಗಿದ್ದರೆ ದೇಶ, ರಾಜ್ಯ, ಜಿಲ್ಲೆಯನ್ನು ಬಲಿಷ್ಠಗೊಳಿಸಬಹುದು. ಹೆಣ್ಣು ಮಕ್ಕಳು ಶಿಕ್ಷಣ ಪಡೆದರೆ ಅವಳ ಕುಟುಂಬವೇ ವಿದ್ಯಾವಂತ ಕುಟುಂಬವಾಗುತ್ತದೆ. ಪೋಷಕರು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ದೇಶದಲ್ಲಿ ಮೊದಲ ಬಾರಿಗೆ ಜಿಲ್ಲೆಯಲ್ಲಿ ಉಷಾ ಆಂದೋಲನದಡಿ 2 ತಿಂಗಳ ವಿಶೇಷ ಕಾರ್ಯಕ್ರಮ ಆರಂಭಿಸಲಾಗಿದೆ. ಇದರ ಉದ್ದೇಶ ಮತ್ತು ಗುರಿಯನ್ನು ಪೂರ್ಣವಾಗಿ ಆಶಾ ಕಾರ್ಯಕರ್ತರು ತಿಳಿಸುವ ಉದ್ದೇಶದಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಜಿಲ್ಲೆಯ ಸಾಮಾಜಿಕ ಸ್ಥಿತಿಗತಿಯ ಬಗ್ಗೆ ಜಾಗೃತಿಗೊಳಿಸಿ ಅವರ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಯೋಜನೆ ಯಡಿ 5ಮುಖ್ಯ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣ ಗಳು ಹೆಚ್ಚಾಗುತ್ತಿವೆ. 10 ಮದುವೆಗಳಲ್ಲಿ 1ರಿಂದ 2 ಬಾಲ್ಯ ವಿವಾಹ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಉಷಾ ಕಾರ್ಯಕ್ರಮದಡಿ ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಅನಿಷ್ಟ ಪದ್ಧತಿ ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಹದಿಹರೆಯದ ಹೆಣ್ಣು ಮಕ್ಕಳಿಗೆ ಮಾನಸಿಕ ಬೆಂಬಲ ಮಾರ್ಗದರ್ಶ ನೀಡುವುದು ಸೇರಿದಂತೆ ಜ. 24ರೊಳಗೆ ಜಿಲ್ಲೆಯ ಎಲ್ಲ ವಿದ್ಯಾರ್ಥಿನಿಯರ ಮನೆ ಯಲ್ಲಿ ಶೌಚಾಲಯ ನಿರ್ಮಿಸುವ ಗುರಿ ಹೊಂದಲಾಗಿದೆ. ಇದರಲ್ಲಿ ಸಾಧನೆ ತೋರುವ ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿನಿಯರನ್ನು ಜನವರಿ 26ರ ಗಣರಾಜ್ಯೋತ್ಸವ ಕಾರ್ಯಕ್ರಮ ದಂದು ಸನ್ಮಾನಿಸಲಾಗುವುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾ ಯಿತಿ ಉಪಾಧ್ಯಕ್ಷ ಎಸ್. ಬಸವರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಚ್. ಪ್ರಸಾದ್‌ ಹಾಜರಿದ್ದರು.

ಆಶಾ ಕಾರ್ಯಕರ್ತೆಯರ ಮನೆಯಲ್ಲಿಯೇ ಶೌಚಾಲಯವಿಲ್ಲ
ಚಾಮರಾಜನಗರ: ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಮುಂದಾಗಿರುವ ಆಶಾ ಕಾರ್ಯಕರ್ತೆಯರ ಮನೆಯಲ್ಲಿಯೇ ಶೌಚಾಯವಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 703 ಆಶಾ ಕಾರ್ಯಕರ್ತೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಪೈಕಿ 224 ಮಂದಿ ಆಶಾ ಕಾರ್ಯಕರ್ತೆಯರು ಶೌಚಾಲಯ ನಿರ್ಮಿಸಿಕೊಂಡಿಲ್ಲ ಎಂದು ವಿಷಾಧಿಸಿದರು.

ಚಾಮರಾಜನಗರ ತಾಲ್ಲೂಕಿನಲ್ಲಿ 78, ಗುಂಡ್ಲುಪೇಟೆ 44, ಯಳಂದೂರು 28 ಹಾಗೂ ಕೊಳ್ಳೇಗಾಲದಲ್ಲಿ 74 ಮಂದಿ ಆಶಾ ಕಾರ್ಯಕರ್ತೆಯರು ಶೌಚಾಲಯ ನಿರ್ಮಿಸಿಕೊಂಡಿಲ್ಲ ಎಂದು ವಿವರಿಸಿದರು. ಡಿ. 31ರೊಳಗೆ ಆಶಾ ಕಾರ್ಯಕರ್ತೆಯರು ಶೌಚಾಲಯ ನಿರ್ಮಿಸಿಕೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದ್ದು, ಎಲ್ಲರು ಶೌಚಾಲಯ ನಿರ್ಮಿಸಿಕೊಳ್ಳಬೇಕು. ಗ್ರಾಮದ ಸ್ವಚ್ಛತೆಯ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT