ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಿಷ್ಠ ವೇತನ ನೀಡಲು ಆಗ್ರಹ

Last Updated 9 ಜನವರಿ 2017, 8:36 IST
ಅಕ್ಷರ ಗಾತ್ರ

ಕುಶಾಲನಗರ: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಮತ್ತು ತುಟ್ಟಿಭತ್ಯೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಬಿ.ನಾಡಗೌಡ ಒತ್ತಾಯಿಸಿದರು.

ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಭಾನುವಾರ ನಡೆದ 3ನೇ ಕೊಡಗು ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾ.ಪಂ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಕಾಯಂಗೊಳಿಸಬೇಕು ಎಂದು ಹಲವು ವರ್ಷಗಳ ಹೋರಾಟಕ್ಕೆ ಇನ್ನೂ ಜಯ ಸಿಕ್ಕಿಲ್ಲ. ಸರ್ಕಾರ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಆದರೆ, ಸಂಘದ ಹೋರಾಟದ ಫಲದಿಂದ ಗ್ರಾ.ಪಂ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ, ಬಹುತೇಕ ಗ್ರಾಮ ಪಂಚಾಯಿತಿಗಳು ಸರ್ಕಾರಿ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾ.ಪಂ ನೌಕರರಿಗೆ ನೀಡುತ್ತಿರುವ ವೇತನ ಅವರ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿಲ್ಲ. ಅಲ್ಲದೆ ಪ್ರತಿ ತಿಂಗಳು ಸರಿಯಾಗಿ ಸಂಬಳ ನೀಡುತ್ತಿಲ್ಲ ಎಂದು ನಾಡಗೌಡ ಬೇಸರ ವ್ಯಕ್ತಪಡಿಸಿದರು.

ಎರಡು ವರ್ಷಗಳ ಹಿಂದ ಗ್ರಾಮೀಣಾಭಿವೃದ್ಧಿ ಸಚಿವರು 27 ಸಾವಿರ ಗ್ರಾ. ಪಂ ನೌಕರರನ್ನು ಕಾಯಂಗೊಳಿಸುವ ಭರವಸೆ ನೀಡಿದ್ದರು. ಇಲ್ಲಿಯವರೆಗೆ ಸಚಿವರ ಭರವಸೆ ಈಡೇರಿಲ್ಲ ಎಂದರು.

ಗ್ರಾ.ಪಂ ನೌಕರರಿಗೆ ಮಾಸಿಕ ವೇತನ ಕನಿಷ್ಠ ₹ 18 ಸಾವಿರ ನಿಗದಿಪಡಿಸಬೇಕು. ಪಿಎಫ್‌ ಯೋಜನೆ ಜಾರಿಗೆ ತರಬೇಕು ಎಂದು ನಾಡಗೌಡ ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾ.ಪಂ.ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿದರು.

ಗ್ರಾ.ಪಂ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.16ರಿಂದ 6 ದಿನಗಳ ಕಾಲ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎಚ್.ಬಿ. ರಮೇಶ್, ಮಹದೇವ್, ತಾಲ್ಲೂಕು ಬಿಸಿ ಊಟ ನೌಕರರ ಸಂಘದ ಅಧ್ಯಕ್ಷೆ ಕಾವೇರಿ, ಜಿಲ್ಲಾ ತೋಟ ಕಾರ್ಮಿಕರ ಸಂಘದ ಕಾರ್ಯದರ್ಶಿ ಎನ್.ಡಿ.ಕುಟ್ಟಪ್ಪ, ಗ್ರಾ.ಪಂ.ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ರವಿ, ತಾಲ್ಲೂಕು ಅಧ್ಯಕ್ಷರಾದ ಪುನೀತ್ ಕುಮಾರ್, ಪೆಮ್ಮಯ್ಯ, ಹನೀಶ್ ಮತ್ತಿತರರು ಉಪಸ್ಥಿತರಿದ್ದರು.

ಮೆರವಣಿಗೆ: ಗ್ರಾ.ಪಂ ನೌಕರರ 3ನೇ ಜಿಲ್ಲಾ ಸಮ್ಮೇಳನದ ಅಂಗವಾಗಿ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು. ಜಿಲ್ಲೆ ವಿವಿಧಡೆಗಳಿಂದ ಬಂದಿದ್ದ ನೂರಾರು ಗ್ರಾ.ಪಂ ನೌಕರರು ಸಿಐಟಿಯು ಸಂಘಟನೆಯ ಬಾವುಟ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT