ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟು ರದ್ದು; ಕೃಷಿಗೆ ಹೊಡೆತ

Last Updated 11 ಜನವರಿ 2017, 10:07 IST
ಅಕ್ಷರ ಗಾತ್ರ

ನಂಜನಗೂಡು: ನೋಟು ರದ್ಧತಿಯಿಂದ ಕೃಷಿ ಕ್ಷೇತ್ರಕ್ಕೆ ಉಂಟಾಗಿರುವ ಆರ್ಥಿಕ ಸಂಕಷ್ಟ ಹಾಗೂ ರೈತ ಸಮುದಾಯಕ್ಕಾ ಗಿರುವ ತೊಂದರೆಗಳ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಆರ್‌ಬಿಐ ಗವರ್ನರ್‍ ಬಳಿ ರೈತರ ನಿಯೋಗ ತೆರಳಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ನಗರದ ಬ್ರಾಹ್ಮಣ ಧರ್ಮ ಸಹಾಯಕ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಕಬ್ಬು ಬೆಳೆಗಾರರ ಸಂಘ ಜಿಲ್ಲಾ ಘಟಕದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಗರಿಷ್ಠ ಮುಖಬೆಲೆಯ ನೋಟು ನಿಷೇಧದಿಂದ ಉಂಟಾಗಿರುವ ತೊಂದರೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಆರ್‌ಬಿಐ ಗವರ್ನರ್ ಅವರನ್ನು ಭೇಟಿ ಮಾಡಲಾಗುತ್ತಿದೆ. ಭೇಟಿ ವೇಳೆ ರಾಜ್ಯದ ಕೃಷಿ ಕ್ಷೇತ್ರದ ಜ್ವಲಂತ ಸಮಸ್ಯೆ ಬಿಚ್ಚಿಡಲಾಗುವುದು ಎಂದು ಹೇಳಿದರು.

ಖಾಸಗಿ ಸಕ್ಕರೆ ಕಾರ್ಖಾನೆಗಳ ಲಾಬಿಗೆ ಮಣಿದಿರುವ ರಾಜ್ಯ ಸರ್ಕಾರ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸಕ್ಕರೆ ಇಳುವರಿ ಶೇ 10ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುತ್ತಿದ್ದರೂ ರೈತರಿಗೆ ಕಡಿಮೆ ದರ ನೀಡಲಾಗುತ್ತಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗಾಗಿ ರಾಜ್ಯ ಸರ್ಕಾರ ಪ್ರತಿ ಟನ್‍ ಕಬ್ಬಿಗೆ ಕನಿಷ್ಠ ₹ 3,500 ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ಅವೈಜ್ಞಾನಿಕ ನೀರು ನಿರ್ವಹಣೆ ನೀತಿಯಿಂದಾಗಿ ನಂಜನಗೂಡು ಮತ್ತು ತಿ.ನರಸೀಪುರ ತಾಲ್ಲೂಕಿನಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿನ ಭತ್ತದ ಬೆಳೆ ಒಣಗಿದ್ದು, ರೈತರಿಗಾಗಿರುವ ನಷ್ಟ ತಪ್ಪಿಸಲು ರಾಜ್ಯ ಸರ್ಕಾರ ತಕ್ಷಣ ಬೆಳೆ ಪರಿಹಾರ ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.

ಸಭೆಯಲ್ಲಿ ಕಬ್ಬು ಬೆಳೆಗಾರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಹಾಡ್ಯ ರವಿ, ಜಿಲ್ಲಾ ಕಾರ್ಯದರ್ಶಿ ಸಿಂಧುವಳ್ಳಿ ಬಸವಣ್ಣ, ತಿ.ನರಸೀಪುರ ಶಂಕರ್, ಅಂಬಳೆ ಮಂಜುನಾಥ್, ರಾಜಣ್ಣ, ಚಿಕ್ಕಸ್ವಾಮಿ, ಸಿದ್ದಲಿಂಗಪ್ಪ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT