ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರಪೀಡಿತ ತಾಲ್ಲೂಕುಗಳ ಸಂಖ್ಯೆ 160ಕ್ಕೆ ಏರುವ ಸಾಧ್ಯತೆ: ಸಚಿವ

Last Updated 17 ಜನವರಿ 2017, 5:53 IST
ಅಕ್ಷರ ಗಾತ್ರ

ಕಲಬುರ್ಗಿ: ‘ರಾಜ್ಯದಲ್ಲಿ ಎಂದೂ ಕಾಣದ ಭೀಕರ ಬರಗಾಲ ತಲೆದೋರಿದ್ದು, ಈಗಾಗಲೇ 139 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಅವುಗಳ ಸಂಖ್ಯೆ 160ಕ್ಕೆ ಏರುವ ಸಾಧ್ಯತೆ ಇದೆ’ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು. 

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ₹17ಸಾವಿರ ಕೋಟಿ ಬೆಳೆ ಹಾನಿಯಾಗಿದ್ದು, ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ₹4,702 ಕೋಟಿ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ₹1,782 ಕೋಟಿ ನೀಡಲು ತೀರ್ಮಾನಿಸಿದ್ದು, ಆ ಹಣವೂ ಇನ್ನೂ ಬಿಡುಗಡೆಯಾಗಿಲ್ಲ’ ಎಂದರು.

‘ಬರದಿಂದ ತತ್ತರಿಸಿದ ತಾಲ್ಲೂಕುಗಳಲ್ಲಿ ಕುಡಿಯುವ ನೀರು, ಮೇವು, ಉದ್ಯೋಗ, ಕೊಳವೆ ಬಾವಿ ನಿರ್ಮಾಣ, ಪೈಪ್‌ಲೈನ್ ಅಳವಡಿಸುವ ಕಾರ್ಯಗಳಿಗೆ ₹641 ಕೋಟಿ ಬಿಡುಗಡೆ ಮಾಡಲಾಗಿದೆ. ಬೆಳೆ ನಷ್ಟ ಪರಿಹಾರ ಮುಖ್ಯವಾಗಿದ್ದು, ಕೇಂದ್ರದಿಂದ ಹಣ ಬಿಡುಗಡೆಯಾದ ಕೂಡಲೇ ರೈತರ ಖಾತೆಗಳಿಗೆ ಆನ್‌ಲೈನ್‌ ಮೂಲಕ ಜಮಾ ಮಾಡಲಾಗುವುದು’ ಎಂದು ತಿಳಿಸಿದರು.

ಕೆರೆ ಒತ್ತುವರಿ ತೆರವಿಗೆ ಸೂಚನೆ:  ಜಲಮೂಲ ಪತ್ತೆ ಹಚ್ಚಲು ಅನುವಾಗುವಂತೆ ಹೊಸ ತಂತ್ರಜ್ಞಾನವುಳ್ಳ ಗ್ರೌಂಡ್ ವಾಟರ್ ಎಕ್ಸ್‌ಪ್ಲೋರೇಶನ್ ಯಂತ್ರಗಳನ್ನು ತಲಾ ₹2ರಂತೆ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಟಿ.ಬಿ.ಜಯಚಂದ್ರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಎರಡು ವರ್ಷಕ್ಕೊಮ್ಮೆ ಅಂತರ್ಜಲಮಟ್ಟದ ದತ್ತಾಂಶ ಸಂಗ್ರಹಿಸಬೇಕು ಎಂದು ಹೇಳಿದರು.

ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಸಮರೋಪಾದಿಯಲ್ಲಿ ತೆರವುಗೊಳಿಸಬೇಕು. ಇದಕ್ಕಾಗಿ ಬಿಡುಗಡೆಯಾದ ₹5.48 ಕೋಟಿ ಖರ್ಚು ಮಾಡಬೇಕು ಎಂದರು.

ಪ್ರಗತಿ ಪರಿಶೀಲನಾ ಸಭೆಗೆ ಕೇವಲ ಅಂಕಿ-ಅಂಶಗಳ ಮಾಹಿತಿ ನೀಡದೇ ನಿಗದಿತ ಕಾಮಗಾರಿಗಳ ವಿವರ ನೀಡಬೇಕು. ಸಣ್ಣ ನೀರಾವರಿ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಂಗಡವಾಗಿ ಕ್ರಿಯಾ ಯೋಜನೆ ರೂಪಿಸಿಕೊಂಡು, ಅನುಮೋದನೆ ಪಡೆಯಬೇಕು. ತುರ್ತು ಸಂದರ್ಭಗಳಲ್ಲಿ ಇ-ಟೆಂಡರ್ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಹೇಳಿದರು.

ಪ್ರಸಕ್ತ ಸಾಲಿನ ಎಲ್ಲ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಿ ಕಾಮಗಾರಿ ಪ್ರಾರಂಭಿಸಬೇಕು. ಶಾಶ್ವತ ಜಲಮೂಲ ಇರುವ ಕಡೆಗಳಲ್ಲಿ ಮಾತ್ರ ರೈತರನ್ನು ವಿಶ್ವಾಸಕ್ಕೆ ಪಡೆದು ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಬೇಕು. ಭಾರಿ ಮಳೆಯಿಂದ ಹಾನಿಗೀಡಾದ ಸಣ್ಣ ನೀರಾವರಿ ಕೆರೆಗಳ ದುರಸ್ತಿ ಕಾರ್ಯವನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು.

ಸಚಿವ ಡಾ. ಶರಣಪ್ರಕಾಶ ಪಾಟೀಲ, ಪ್ರವಾಸೋದ್ಯಮ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ. ಉಮೇಶ ಜಾಧವ್, ಆಳಂದ ಶಾಸಕ ಬಿ.ಆರ್. ಪಾಟೀಲ, ಜಿಲ್ಲಾಧಿಕಾರಿ ಉಜ್ವಲ್‌ಕುಮಾರ್ ಘೋಷ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT