ಬೆಂಗಳೂರು: ಪ್ರತಿಷ್ಠಿತ ಶಾಲೆಗಳಲ್ಲಿ ಪೌರ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ಕೋಟಾ ಕಲ್ಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ವಸತಿ ಸೌಲಭ್ಯ ಹೊಂದಿರುವ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತ್ಯೇಕ ಕೋಟಾ ಕಲ್ಪಿಸುವ ಉದ್ದೇಶ ಇದೆ ಎಂದು ಅವರು ಹೇಳಿದರು.
ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿ ಪೌರ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ಕೋಟಾ (ಸಬ್ ಕೋಟಾ) ನೀಡುವ ಪ್ರಸ್ತಾವ ಇದೆ. ಮುಖ್ಯಮಂತ್ರಿ ಫೆ. 3 ರಂದು ಕರೆದಿರುವ ಸಭೆಯಲ್ಲಿ ಈ ಸಂಬಂಧ ಚರ್ಚಿಸಲಾಗುವುದು ಎಂದರು. ಇದೇ ಸಭೆಯಲ್ಲಿ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವುದೂ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಣಕಾಸು ಇಲಾಖೆ, ಶಿಕ್ಷಣ ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಭಾಗವಹಿಸುವರು ಎಂದು ಆಂಜನೇಯ ತಿಳಿಸಿದರು.