ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಿತಾಂಶ ಕಡಿಮೆ: ಅಧಿಕಾರಿಗಳೇ ಹೊಣೆ

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಎಚ್ಚರಿಕೆ
Last Updated 28 ಜನವರಿ 2017, 7:21 IST
ಅಕ್ಷರ ಗಾತ್ರ

ಬೀದರ್: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶ ಕಡಿಮೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಸಂಬಂಧ ನಡೆದ ಜಿಲ್ಲಾಮಟ್ಟದ  ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 26 ಸಾವಿರ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಶೇ 86ಕ್ಕಿಂತ ಹೆಚ್ಚು ಫಲಿತಾಂಶ ಬರುವಂತಾಗಲು ವಿದ್ಯಾರ್ಥಿಗಳಿಗೆ ಸರಿಯಾಗಿ ಮಾರ್ಗದರ್ಶನ ನೀಡಬೇಕು ಎಂದು  ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರತಿ ವಾರ ಶಿಕ್ಷಕರ ಕಾರ್ಯಾಗಾರ ಮಾಡುತ್ತಿದ್ದೇವೆ. ಈವರೆಗೆ 900 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಶಾಲೆಗಳಲ್ಲಿ ಬೆಳಿಗ್ಗೆ 8.30 ರಿಂದ 9.40ರ ವರೆಗೆ, ಸಂಜೆ 4 ರಿಂದ 5.50 ರ ವರೆಗೆ ವಿಶೇಷ ತರಗತಿಗಳು ನಡೆಯುತ್ತಿವೆ. ಜನವರಿ ಒಳಗೆ ಭಾಷಾ ವಿಷಯಗಳ ಪಠ್ಯಕ್ರಮ ಪೂರ್ಣಗೊಳಿಸಬೇಕು.  ನಾಲ್ಕು ವಿಷಯಗಳ ಪಠ್ಯವನ್ನು ಫೆಬ್ರುವರಿ ಒಳಗೆ  ಪೂರ್ಣಗೊಳಿಸುವಂತೆ ಎಲ್ಲ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣಾಧಿಕಾರಿಗಳು ತಿಳಿಸಿದರು.

ಶಾಲೆಗಳಲ್ಲಿ  ವಿದ್ಯಾರ್ಥಿಗಳ ಹಾಜರಾತಿ ಉತ್ತಮವಾಗಿದೆ. ಕಳೆದ ವರ್ಷ 14 ಪ್ರೌಢ ಶಾಲೆಗಳಲ್ಲಿ  ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದೆ. ಈ ಬಾರಿ ಎಲ್ಲ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಹಿಂದಿನ ವರ್ಷಗಳ ಮಾದರಿ ಪ್ರಶ್ನೆ  ಪತ್ರಿಕೆಗಳನ್ನು ಸಂಗ್ರಹಿಸಲಾಗಿದೆ.  ಅವುಗಳನ್ನು ಪ್ರತಿಶಾಲೆಗೂ ತಲುಪಿಸುವಂತೆ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆರ್. ಸೆಲ್ವಮಣಿ ತಿಳಿಸಿದರು.

ಆಯಾ ಶಾಲೆಗಳಲ್ಲಿ ನಡೆಯುತ್ತಿರುವ ತರಬೇತಿಗಳ ಬಗೆಗೆ ಪರಿಶೀಲನೆ ನಡೆಸಬೇಕು. ಅತಿ ಕಡಿಮೆ ಫಲಿತಾಂಶ ಪಡೆದ ಶಾಲೆಗಳನ್ನು ಗುರುತಿಸಿ ಅಲ್ಲಿ  ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಡಿ. ಷಣ್ಮುಖ ಇದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT