ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷಕ್ಕೆ ಶಕ್ತಿ ತುಂಬಲು ಸಂಘಟಿತರಾಗಿ

ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಎಚ್‌.ಡಿ.ದೇವೇಗೌಡ ಪ್ರಚಾರ
Last Updated 30 ಜನವರಿ 2017, 7:37 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ವ್ಯಾಪ್ತಿ ಬಹು ವಿಸ್ತಾರವಾಗಿದೆ. ಹೀಗಾಗಿ ಪಕ್ಷದ ಅಭ್ಯರ್ಥಿ, ಮುಖಂಡರು ಮತದಾರರ ಮನೆ ಬಾಗಿಲಿಗೆ ಹೋಗಿ ಮತಯಾಚಿಸುವುದು ಕಷ್ಟ. ಹೀಗಾಗಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷ ಮತ್ತು ಅಭ್ಯರ್ಥಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಂಘಟಿತರಾಗಿ ತಮ್ಮ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ನಡೆಸಬೇಕು’ ಎಂದು ಜೆಡಿಎಸ್‌ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದರು.

ನಗರದಲ್ಲಿ ಭಾನುವಾರ ಆಯೋಜಿಸಿದ್ದ ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಂತಿರುವ ಈ ಉಪ ಚುನಾವಣೆಯಲ್ಲಿ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ಮಟ್ಟದಲ್ಲಿರುವ ಪಕ್ಷದ ಕಾರ್ಯಕರ್ತರು, ಶಾಸಕರು, ಮುಖಂಡರೆಲ್ಲರೂ ಸೇರಿ ಪಕ್ಷದ ಅಭ್ಯರ್ಥಿ ರಮೇಶ್‌ ಬಾಬು ಅವರ ಗೆಲುವಿಗಾಗಿ ಶ್ರಮಿಸಬೇಕು’ ಎಂದು ತಿಳಿಸಿದರು.

‘ಈ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ ಎರಡು ರಾಷ್ಟ್ರೀಯ ಪಕ್ಷಗಳ ಜತೆಗೆ ಪೈಪೋಟಿ ನಡೆಸುತ್ತಿದೆ. ಈ ಚುನಾವಣೆಯಲ್ಲಿ ವಿದ್ಯಾವಂತ ಎಚ್ಚೆತ್ತ ಮತದಾರರ ನಿರ್ಣಯ ಬಹಳ ಮುಖ್ಯವಾಗಿದೆ. ರಮೇಶ್ ಬಾಬು ಹತ್ತಾರು ವರ್ಷಗಳಿಂದ ಪಕ್ಷದ ವಕ್ತಾರರಾಗಿ ಕೆಲಸ ಮಾಡುತ್ತ ಪ್ರತಿಯೊಬ್ಬ ಮುಖಂಡರಿಗೆ ಪರಿಚಿತರಾಗಿದ್ದಾರೆ. ಹೀಗಾಗಿ ರಮೇಶ್‌ ಬಾಬು ಅವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸಬೇಕಾಗಿದೆ’ ಎಂದರು.

‘ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತೊಂದು ಅವಕಾಶ ಕೊಡೋಣ ಎನ್ನುವ ಧ್ವನಿ ಕೇಳಿಬರುತ್ತಿದೆ. ನಾನು ಇನ್ನು ಎರಡು ವರ್ಷಗಳ ಕಾಲ ಹೋರಾಟ ಮಾಡುತ್ತೇನೆ. ವಿಧಾನಸಭೆ ಚುನಾವಣೆ ಮುಗಿಯುವವರೆಗೂ ವಿಶ್ರಾಂತಿ ಪಡೆಯದೇ ರಾಜ್ಯದ ಪ್ರತಿ ಹಳ್ಳಿ ಸುತ್ತುತ್ತೇನೆ. ನನ್ನ ಮನಸ್ಸಿಗೆ ಪ್ರಾದೇಶಿಕ ಪಕ್ಷ ಉಳಿಯಬೇಕು ಎನ್ನುವ ಕಟಿ ಬದ್ಧತೆ ಇದೆ’ ಎಂದು ಹೇಳಿದರು. 

ವಿಧಾನ ಪರಿಷತ್ ಸದಸ್ಯರಾದ ತೂಪಲ್ಲಿ ಚೌಡರೆಡ್ಡಿ, ಎನ್‌.ಅಪ್ಪಾಜಿಗೌಡ, ಸಿ.ಆರ್.ಮನೋಹರ್, ಶಾಸಕರಾದ ಎಂ.ರಾಜಣ್ಣ, ಜೆ.ಕೆ.ಕೃಷ್ಣಾರೆಡ್ಡಿ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ.ನಾಗರಾಜ್‌, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ.ರಾಜಾಕಾಂತ್, ಕೆ.ಎಂ.ಮುನೇಗೌಡ ಮತ್ತು ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.

ರಮೇಶ್‌ ಬಾಬು ಅಧಿಕೃತ ಅಭ್ಯರ್ಥಿ
‘ಈ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎಂದು ಪ್ರಚಾರ ಮಾಡುತ್ತಿರುವ ಎಚ್.ಎಸ್.ಅರವಿಂದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಕೂಡ ಪಡೆದಿಲ್ಲ. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ತೂಪಲ್ಲಿ ಚೌಡರೆಡ್ಡಿ ಮತ್ತು  ಶಾಸಕ ಎಚ್.ಎಸ್. ಶಿವಶಂಕರ್ ಅವರು ಮನವೊಲಿಸಲು ಪ್ರಯತ್ನಿಸಿದರು. ಅವರ ಮಾತಿಗೂ ಬೆಲೆ ಕೊಡದೆ ಅರವಿಂದ್ ಹೊರಟು ಹೋದರು. ಅವರ ಕುಟುಂಬದ ಆಂತರಿಕ ವಿಚಾರ ನಾನು ಮಾತನಾಡುವುದಿಲ್ಲ. ರಮೇಶ್‌ ಬಾಬು ಅವರೇ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ. ಇದರಲ್ಲಿ ಗೊಂದಲ ಬೇಡ’ ಎಂದು ದೇವೇಗೌಡರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT