ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ವಿಳಂಬಕ್ಕೆ ಕಾರಣ ಗುರುತಿಸಿ

ಜಿಲ್ಲಾ ಪಂಚಾಯಿತಿ ಸಿಇಒ ಅನಿರುದ್ಧ ಶ್ರವಣ ಪಿ. ಸೂಚನೆ
Last Updated 14 ಫೆಬ್ರುವರಿ 2017, 8:22 IST
ಅಕ್ಷರ ಗಾತ್ರ
ಕಲಬುರ್ಗಿ: ಅಂಗನವಾಡಿ ಕಟ್ಟಡಗಳ ನಿರ್ಮಾಣ, ಶಾಲಾ ಕಟ್ಟಡ ಹಾಗೂ ರಸ್ತೆ ಕಾಮಗಾರಿಗಳು ವಿಳಂಬವಾಗುವುದಕ್ಕೆ ಕಾರಣ ಏನು ಹಾಗೂ ಇದಕ್ಕೆ ನಿರ್ದಿಷ್ಟ ಹೊಣೆಗಾರರನ್ನು ಅಧಿಕಾರಿಗಳು ಸ್ಪಷ್ಟವಾಗಿ ಗುರುತಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿರುದ್ಧ ಶ್ರವಣ ಪಿ. ಸೂಚನೆ ನೀಡಿದರು.
 
ಇಲ್ಲಿನ ಜಿಲ್ಲಾ ಪಂಚಾಯಿತಿ ನೂತನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಎಚ್‌. ಮಲಾಜಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
 
ನಿರ್ಮಾಣ ಕಾಮಗಾರಿಗಳ ವಿಳಂಬಕ್ಕೆ ಕೇವಲ ಎಂಜಿನಿಯರುಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಇದರಲ್ಲಿ ಗುತ್ತಿಗೆದಾರರೂ ತಪ್ಪು ಮಾಡಿರುತ್ತಾರೆ. ಟೆಂಡರ್‌ನಲ್ಲಿ ನೀಡಿದ ಗಡುವು ಮುಗಿದರೂ ಕೆಲಸ ಮುಗಿಸದಿರುವುದು ಹಾಗೂ ಗುಣಮಟ್ಟ ಕಾಯ್ದುಕೊಳ್ಳದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಹೇಳಿದರು.
 
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೆಶಕರು ಪ್ರತಿ ಸೋಮವಾರ ಎಲ್ಲ ವಾರ್ಡನ್‌ಗಳ ಸಭೆ ಕರೆಯಬೇಕು. ಇಲಾಖೆಯಿಂದ ನಡೆಸುವ ಎಲ್ಲ ವಸತಿ ನಿಲಯಗಳ ಸಮರ್ಪಕ ನಿರ್ವಹಣೆಯನ್ನು ವಿಚಾರಿಸಬೇಕು. ಸಮರ್ಪಕ ಆಹಾರ ಪೂರೈಕೆ, ಕೋಣೆ ಮತ್ತು ಶೌಚಾಲಯಗಳ ಹಾಗೂ ವಸತಿ ನಿಲಯದ ಆವರಣಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳುತ್ತಿರುವ ಬಗ್ಗೆ ಚರ್ಚಿಸಬೇಕು ಎಂದು ತಿಳಿಸಿದರು.
 
ವಸತಿ ನಿಲಯ ವಾರ್ಡನ್‌ಗಳ ಕಡ್ಡಾಯ ಹಾಜರಾತಿಗೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಬೇಕು. ವಸತಿ ನಿಲಯಗಳ ಭೇಟಿ ತೀವ್ರಗೊಳಿಸಿ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರ ಕನಿಷ್ಠ ಮೂಲ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಚುನಾಯಿತ ಪ್ರತಿನಿಧಿಗಳು ಕೇಳುವ ಮಾಹಿತಿಯನ್ನು ಸಕಾಲದಲ್ಲಿ ಒದಗಿಸಬೇಕು ಎಂದು ಹೇಳಿದರು.
 
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ ಮಾತನಾಡಿ, ಕುಡಿಯುವ ನೀರು ಸರಬರಾಜು ಕಾಮಗಾರಿಗಳಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಕಾಲಕಾಲಕ್ಕೆ ಕಾಮಗಾರಿಗಳ ತಪಾಸಣಾ ಕಾರ್ಯ ಕೈಗೊಳ್ಳಬೇಕು. ಕಾಮಗಾರಿಗಳಲ್ಲಿ ವಿಳಂಬವಾಗುವುದನ್ನು ಸಹಿಸಲಾಗದು. ಕಾಮಗಾರಿ ಪೂರ್ಣಗೊಳಿಸಲು ಸಹಕರಿಸದ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೇಳಿದರು. 
 
ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಶಾಲೆಗಳಲ್ಲಿ ಕೆಲವು ದಿನಗಳ ಕಾಲ ಊಟ ಪೂರೈಸಿಲ್ಲ ಎನ್ನುವುದು ಸರಿಯಲ್ಲ. ಊಟ ಪೂರೈಸುವ ಸರ್ಕಾರೇತರ ಸಂಘ, ಸಂಸ್ಥೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಫಲರಾದ ಅಧಿಕಾರಿಗಳ ಹಾಗೂ ಶಾಲಾ ಮುಖ್ಯಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ತಿಳಿಸಿದರು.
 
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವಾಣ್‌, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕ್ಕಮ್ಮ ಹಿರೇಮಠ, ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್‌ ಇದ್ದರು.
 
ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾದ ಕುಡಿಯುವ ನೀರು ಸರಬರಾಜಿನ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಜನರಿಗೆ ನೀರು ಪೂರೈಸಬೇಕು
ಸುವರ್ಣಾ ಮಲಾಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT