ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿಗೆ ಸೇರಿಸಲು ಆಗ್ರಹ

ಚಿತ್ರದುರ್ಗ ಜಿಲ್ಲಾಧಿಕಾರಿಗೆ ಸವಿತಾ ಸಮಾಜದ ಮುಖಂಡರಿಂದ ಮನವಿ
Last Updated 15 ಫೆಬ್ರುವರಿ 2017, 6:30 IST
ಅಕ್ಷರ ಗಾತ್ರ

ಚಿತ್ರದುರ್ಗ: ಸವಿತಾ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಸವಿತಾ ಸಮಾಜದ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲಕಾಲ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಮನವಿ ಸಲ್ಲಿಸಿದರು.

ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಸವಿತಾ ಸಮಾಜ, ಎಲ್ಲ ಜಾತಿ, ಧರ್ಮದವರಿಗೂ ಯಾವುದೇ ಭೇದವಿಲ್ಲದೆ ಸೇವೆ ಸಲ್ಲಿಸುತ್ತಿದೆ. ಆದರೆ, ಸವಿತಾ ಸಮಾಜ ಇಂದಿಗೂ ಸಂಕಷ್ಟದಲ್ಲಿದೆ ಎಂದು ಹೇಳಿದರು. ಸವಿತಾ ಸಮಾಜ ರಾಜಕೀಯ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ. ಸಮಾಜ ಇಂದಿಗೂ ಅತ್ಯಂತ ಶೋಚನೀಯ ಪರಿಸ್ಥಿತಿಯಲ್ಲಿದೆ ಎಂದು ಅಳಲು ತೋಡಿಕೊಂಡರು.

ಸವಿತಾ ಸಮಾಜ ಸಂಘಟನೆಯಲ್ಲಿ ಹಿಂದುಳಿದಿದ್ದು, ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಸಮಾಜದ ಕಷ್ಟಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ವಿಫಲವಾಗಿದೆ. ಆದ್ದರಿಂದ ಈ ಸಮಾಜವನ್ನು ಅಸಂಘಟಿತ ವಲಯ ಎಂದು ಕೂಡಲೇ ಪರಿಗಣಿಸಬೇಕು ಎಂದು ಆಗ್ರಹಿಸಿದರು. ಕೇರಳ ಮತ್ತು ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಈ ಸಮಾಜದವರಿಗೂ ನೀಡಬೇಕು ಎಂದು ಒತ್ತಾಯಿಸಿದರು.

50 ವರ್ಷ ಮೇಲ್ಪಟ್ಟ ಕಸುಬುದಾರರಿಗೆ ತಿಂಗಳ ಪಿಂಚಣಿ ಮತ್ತು ವಸತಿ ನೀಡುವ ಯೋಜನೆ ಜಾರಿಗೊಳಿಸಬೇಕು. ಸವಿತಾ ಸಮಾಜದ ಅಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎನ್.ಡಿ.ಕುಮಾರ್, ಉಪಾಧ್ಯಕ್ಷ ಎನ್.ಶ್ರೀನಿವಾಸ್, ಖಜಾಂಚಿ ಜಿ.ಕೆ.ವೆಂಕಟೇಶ್, ಪ್ರತಿನಿಧಿ ಜಿ.ಜಿ.ಸಾಯಿನಾಥ, ಕಾರ್ಯದರ್ಶಿ ಹನುಮಂತಪ್ಪ, ಘನಶ್ಯಾಮ್, ಪಲ್ಲವಿ ಪ್ರಸನ್ನ, ವರದರಾಜು, ನಾಗರಾಜ್, ಆರ್.ಶ್ರೀನಿವಾಸ್, ಸಂತೋಷ್‌ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT