ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಮನವಿ ಸಲ್ಲಿಸಲು ಆಗ್ರಹ: ಧರಣಿ

ಎಸ್‌ಸಿ, ಎಸ್‌ಟಿ ನೌಕರರ ಬಡ್ತಿ ಮೀಸಲಾತಿ ರದ್ದು–ಖಂಡನೆ
Last Updated 21 ಫೆಬ್ರುವರಿ 2017, 5:39 IST
ಅಕ್ಷರ ಗಾತ್ರ

ಬೀದರ್:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಬಡ್ತಿ ಮೀಸಲಾತಿ ಸಂರಕ್ಷಿಸಲು ಸುಪ್ರೀಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಬಡ್ತಿಯಲ್ಲಿ ಪರಿಶಿಷ್ಟ ಜಾತಿ ನೌಕರರಿಗೆ ಶೇ 15 ಹಾಗೂ ಪರಿಶಿಷ್ಟ ಪಂಗಡ ನೌಕರರಿಗೆ ಶೇ 3 ರಷ್ಟು ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ 2002ರ ಆದೇಶವನ್ನು ಸುಪ್ರೀಂಕೋರ್ಟ್ ಫೆ. 9 ರಂದು ರದ್ದುಪಡಿಸಿದೆ. ಇದರಿಂದ 2002 ರಿಂದ ಮುಂಬಡ್ತಿ ಪಡೆದಿರುವ 36 ಇಲಾಖೆಗಳ ಸುಮಾರು 10 ಸಾವಿರ ನೌಕರರು ಹಾಗೂ ಅಧಿಕಾರಿಗಳಿಗೆ ಹಿಂಬಡ್ತಿ ಆಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಎಸ್‌ಸಿ, ಎಸ್‌ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ಒದಗಿಸಿದರೆ ಆಡಳಿತದ ದಕ್ಷತೆಗೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಉನ್ನತ ಹುದ್ದೆಗಳಲ್ಲಿ ಅವರ ಕೊರತೆಯೂ ಇದೆ ಎನ್ನುವುದನ್ನು ಸಾಬೀತುಪಡಿಸುವ ಸಾಕ್ಷ್ಯಾಧಾರಗಳನ್ನು ಸುಪ್ರೀಂಕೋರ್ಟ್‌ಗೆ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ ವ್ಯತಿರಿಕ್ತ ತೀರ್ಪು ಬಂದಿದೆ ಎಂದು ಆಪಾದಿಸಿದರು.

ಸುಪ್ರೀಕೋರ್ಟ್ ತೀರ್ಪು ರಾಜ್ಯದ ಎಸ್‌ಸಿ, ಎಸ್‌ಟಿ ನೌಕರರಿಗೆ ಮರಣಶಾಸನವಾಗಿ ಪರಿಣಮಿಸಿದೆ. ಸಾಮಾಜಿಕ ನ್ಯಾಯಕ್ಕೆ ಧಕ್ಕೆ ಉಂಟು ಮಾಡಲಿದೆ ಎಂದು ದೂರಿದರು.

ರಾಜ್ಯ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿ ಅಗತ್ಯ ಸಾಕ್ಷಾಧಾರಗಳನ್ನು ಹಾಜರುಪಡಿಸಬೇಕು. ಸುಪ್ರೀಂಕೋರ್ಟ್ ಆದೇಶದಲ್ಲಿ ತಿಳಿಸಲಾದ ನ್ಯೂನ್ಯತೆಗಳನ್ನು ಸರಿಪಡಿಸಲು ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವ ಹೊಸ ಕಾನೂನನ್ನು ಪ್ರಸಕ್ತ ಸಾಲಿನ ಮುಂಗಡಪತ್ರದಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು. ಲೋಕಸಭೆಯಲ್ಲಿ ನನೆಗುದಿಗೆ ಬಿದ್ದಿರುವ ಬಡ್ತಿ ಮೀಸಲಾತಿ ಮಸೂದೆ ಜಾರಿಗೊಳಿಸಲು ಕೇಂದ್ರ ಸರ್ಕಾರವೂ ಪ್ರಸಕ್ತ ಮುಂಗಡಪತ್ರದಲ್ಲಿ ಸಂವಿಧಾನದ 117ನೇ ತಿದ್ದುಪಡಿ ವಿಧೇಯಕ ಅಂಗೀಕರಿಸಬೇಕು. ಮೀಸಲಾತಿ ವಿಧೇಯಕಗಳನ್ನು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು.

ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿಠ್ಠಲ ಬಿ. ನಾಯಕ್, ಕಾರ್ಯದರ್ಶಿ ದೇವಿದಾಸ ಸೂರ್ಯವಂಶಿ, ಜಿಲ್ಲಾ ಘಟಕದ ಅಧ್ಯಕ್ಷ ಅಂಕುಶ ಗೋಖಲೆ, ಉಪಾಧ್ಯಕ್ಷ ಜ್ಞಾನಚಂದ್ರ ಶೆಟಕಾರ, ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ ವಾಲಿ, ಅಶೋಕ ಮಂಠಾಳಕರ್, ಅಂಬಾದಾಸ ಚಕ್ರವರ್ತಿ, ರಾಜಕುಮಾರ ಶಿಂಧೆ, ಪವನಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT