ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುಹಳ್ಳಿ ನೀರಿನ ಯೋಜನೆಗೆ ಆದ್ಯತೆ

ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ್‌ ಮೊಹಸಿನ್ ಸೂಚನೆ
Last Updated 2 ಮಾರ್ಚ್ 2017, 4:53 IST
ಅಕ್ಷರ ಗಾತ್ರ

ವಿಜಯಪುರ: ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ್‌ ಮೊಹಸಿನ್ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ವರ್ಷ 14 ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳ ಪೈಕಿ 8 ಯೋಜನೆಗಳನ್ನು ಪೂರ್ಣಗೊಳಿ ಸಲಾಗಿದೆ. ಬಾಕಿ ಉಳಿದಿರುವ 6 ಯೋಜನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಹೊರ್ತಿ, ಇಂಚಗೇರಿ ಮತ್ತು ತಿಕೋಟಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಬೃಹತ್ ಪ್ರಮಾಣದ ಯೋಜನೆಗಳಾಗಿದ್ದು, ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆಯ ಮೇಲೆ ವಿದ್ಯುತ್ ಸಂಪರ್ಕ ಸಹ ಕಲ್ಪಿಸುವಂತೆ ಹೆಸ್ಕಾಂ ಅಧಿ ಕಾರಿಗಳಿಗೆ ಅವರು ಸೂಚಿಸಿದರು.

ಕೃಷಿ ಭಾಗ್ಯ ಯೋಜನೆಯಡಿ ಮಾರ್ಚ್‌ ಅಂತ್ಯದೊಳಗೆ 5 ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಈ ಗುರಿಗೆ ತಕ್ಕಂತೆ ಮೇ ಅಂತ್ಯದೊಳಗೆ ಈ ಎಲ್ಲ ಕೃಷಿ ಹೊಂಡಗಳನ್ನು ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗಾವಕಾಶ, ಅವರ ಮಕ್ಕಳಿಗೆ ಶಾಲೆಗಳಲ್ಲಿ ಮತ್ತು ವಸತಿ ನಿಲಯಗಳಲ್ಲಿ ಪ್ರವೇಶಾವಕಾಶ ದೊರೆಯುವಂತೆ ಹಾಗೂ ಈ ರೈತರ ವಾರಸುದಾರರಿಗೆ ಪಿಂಚಣಿ ದೊರೆ ಯುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಅನುಕೂಲವಾಗುವಂತೆ 236 ಆಶಾ ಕಾರ್ಯಕರ್ತೆಯರನ್ನು ತಕ್ಷಣ ನೇಮಿಸಬೇಕು. 266 ಅಂಗನವಾಡಿ ಕಾರ್ಯಕರ್ತೆಯರು ಮತ್ತು 261 ಅಂಗನವಾಡಿ ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದರು.

40 ತಜ್ಞ ವೈದ್ಯರ ಕೊರತೆಯನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಐಎಂಎಗಳೊಂದಿಗೆ, ವೈದ್ಯಕೀಯ ಕಾಲೇಜುಗಳೊಂದಿಗೆ ಚರ್ಚಿಸಿ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದರು.

ಹಿಂದುಳಿದ ವರ್ಗಗಳ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗನ ವಾಡಿ ಮಕ್ಕಳಿಗೆ ಶಾಲಾ ಶಿಷ್ಯವೇತನ ಮುಂದಿನ ದಿನಗಳಲ್ಲಿ ದೊರೆಯ ಬೇಕಾದರೆ ಆಧಾರ್‌ ಜೋಡಣೆ ಇರುವುದು ಅತ್ಯಂತ ಅವಶ್ಯಕ ವಾಗಿದೆ. ಕಾರಣ ಆಧಾರ್‌ ಜೋಡಣೆ ಕಾರ್ಯ ಚುರುಕು ಗೊಳಿಸಬೇಕು ಎಂದು ಹೇಳಿದರು.

ವಕ್ಫ್ ಆಸ್ತಿಗೆ ಸಂಬಂಧಪಟ್ಟಂತೆ ಸರ್ವೇ ಪೂರ್ಣಗೊಂಡಿರುವ ಆಸ್ತಿಗಳ ವರದಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಸಲ್ಲಿಸಬೇಕು. ಇಂತಹ ಆಸ್ತಿಗಳ ಮತ್ತು ಖಾತೆ, ಉತಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಂದಾಯ ಅಧಿಕಾರಿಗಳ ಸಭೆಯಲ್ಲಿ ಪರಿಹರಿಸಿಕೊಳ್ಳುವಂತೆ ಅವರು ಸೂಚಿಸಿದರು. ಸಭೆಗೆ ಸೂಕ್ತ ಮಾಹಿತಿ ಇಲ್ಲದೇ ಬಂದ ಹಿನ್ನೆಲೆಯಲ್ಲಿ ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಶಿವಕುಮಾರ ಕೆ.ಬಿ. ಅವರು ಮಾತನಾಡಿ, ಜಿಲ್ಲೆಯಲ್ಲಿ ಗರಿಷ್ಠ 10 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿದ್ದು, ಆಲಮೇಲ, ಇಂಡಿ ಮತ್ತು ಇತರ ಸ್ಥಳಗಳಲ್ಲಿ ಮೇವನ್ನು ಸಹ ಬೆಳೆಯಲಾಗುತ್ತಿದೆ. ರೈತರಿಗೆ ಬೆಳೆ ಪರಿಹಾರ ವಿತರಿಸಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಸುಂದರೇಶ ಬಾಬು, ಎಡಿಸಿ ಡಾ.ಎಸ್.ಬಿ.ಬೂದೆಪ್ಪ ಇದ್ದರು.

*
ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ವಿಶೇಷ ಪ್ರವಾಸಿ ಟ್ಯಾಕ್ಸಿ ವ್ಯವಸ್ಥೆ ಮಾಡುವ ಕುರಿತು ಪ್ರಸ್ತಾವ ರೂಪಿಸಬೇಕು.
-ಮಹಮ್ಮದ್‌ ಮೊಹಸಿನ್,
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT