ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿಗೆ ಜೆಡಿಎಸ್‌ ಬೆಂಬಲಿತರ ಆಯ್ಕೆ

Last Updated 4 ಮಾರ್ಚ್ 2017, 7:35 IST
ಅಕ್ಷರ ಗಾತ್ರ

ರಾಮನಗರ: ರಾಮನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಪುಟ್ಟರಾಮಯ್ಯ ಮತ್ತು ಉಪಾಧ್ಯಕ್ಷರಾಗಿ ಶಿವರತ್ನಮ್ಮ ಅವಿರೋಧವಾಗಿ ಆಯ್ಕೆಯಾದರು.

ನಗರದ ಎಪಿಎಂಸಿ ಮಾರುಕಟ್ಟೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೂಟಗಲ್ ಕ್ಷೇತ್ರದ ಪುಟ್ಟರಾಮಯ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಗ್ಗಿಕುಪ್ಪೆ ಕ್ಷೇತ್ರದ ಶಿವರತ್ನಮ್ಮ ಅವರನ್ನು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಚುನಾವಣಾಧಿಕಾರಿ ತಹಶೀಲ್ದಾರ್ ಎನ್‌. ರಘುಮೂರ್ತಿ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಜ.17ರಂದು ನಡೆದ ಎಪಿಎಂಸಿ ಚುನಾವಣೆಯಲ್ಲಿ ಶಾಸಕ  ಎಚ್.ಡಿ.ಕುಮಾರಸ್ವಾಮಿ ಅವರ ಭದ್ರಕೋಟೆಯಾದ ರಾಮನಗರ ಎಪಿಎಂಸಿಯಲ್ಲಿ  12 ಕ್ಷೇತ್ರಗಳ ಪೈಕಿ  11 ರಲ್ಲಿ ಜೆಡಿಎಸ್ ಬೆಂಬಲಿತರು ಗೆಲವು ಸಾಧಿಸಿದ್ದರು.

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಕೆಲವರು ಆಕಾಂಕ್ಷಿಯಾಗಿದ್ದರು. ಆದರೆ, ಶಾಸಕ ಎಚ್.ಸಿ.ಬಾಲಕೃಷ್ಣ ಹಾಗೂ ಮಾಜಿ ಶಾಸಕ ಕೆ.ರಾಜು ಅವರು ಅಧ್ಯಕ್ಷರಾಗಿ ಎಚ್.ಪುಟ್ಟರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಎಸ್.ಶಿವರತ್ನಮ್ಮ ಅವಿರೋಧವಾಗಿ ಆಯ್ಕೆಯಾಗುವಂತೆ ನೋಡಿಕೊಂಡಿದ್ದಾರೆ.

ಪುಟ್ಟರಾಮಯ್ಯ ಮಾತನಾಡಿ ‘ಜಿಲ್ಲಾ ಕೇಂದ್ರವಾಗಿರುವುದರಿಂದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸಾಕಷ್ಟು ಬದಲಾವಣೆಗಳು ಅಗಬೇಕಾಗಿದೆ. ಇದರ ಬಗ್ಗೆ ರೈತರಿಂದ ಮನವಿಗಳು ಬಂದಿವೆ. ಇವುಗಳನ್ನು ಗಮನದಲ್ಲಿರಿಸಿಕೊಂಡು ಎಪಿಎಂಸಿಯಲ್ಲಿ ಸಮಗ್ರ ಬದಲಾವಣೆಗೆ ಶ್ರಮಿಸಲಾಗುತ್ತದೆ’ ಎಂದು ತಿಳಿಸಿದರು.

‘ರೈತರ ಒಡನಾಡಿಯಾಗಿರುವ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬಿಳಿ ಚೀಟಿ ದಂಧೆ ವ್ಯಾಪಕವಾಗಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ. ಇದನ್ನು ನಿಯಂತ್ರಿಸಲು ಸದ್ಯದಲ್ಲಿಯೇ ದಳ್ಳಾಳಿಗಳು ಮತ್ತು ರೈತರ ಸಭೆಯನ್ನು ಕರೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

‘ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಸಲಹೆ ಮತ್ತು ಮಾರ್ಗದರ್ಶನ ಪಡೆದು ರಾಮನಗರ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ರೈತ ಸ್ನೇಹಿ ಮಾದರಿ ಮಾರುಕಟ್ಟೆಯಾಗಿ ಮಾಡಲಾಗುವುದು’ ಎಂದು ತಿಳಿಸಿದರು.

ಶಾಸಕ ಎಚ್.ಸಿ. ಬಾಲಕೃಷ್ಣ ಮಾತನಾಡಿ ‘ಎಪಿಎಂಸಿ ನಿರ್ದೇಶಕರಾಗಿ ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು ಜಿಲ್ಲಾ ಪಂಚಾಯಿತಿ ಸದಸ್ಯರಾಗುವ ಅರ್ಹತೆ ಉಳ್ಳವರಾಗಿದ್ದಾರೆ. ಹೀಗಾಗಿ ಜೆಡಿಎಸ್ ಬೆಂಬಲಿತರಾಗಿ ಆಯ್ಕೆಯಾಗಿರುವ ನಿರ್ದೇಶಕರ ಪೈಕಿ ಐದು ಮಂದಿಗೆ ಐದು ವರ್ಷಗಳಲ್ಲಿ ಒಂದೊಂದು ವರ್ಷದ ಅವಧಿಗೆ ಅಧ್ಯಕ್ಷ ಮತ್ತು ಐದು ಜನರಿಗೆ ಉಪಾಧ್ಯಕ್ಷ ಸ್ಥಾನವನ್ನು ನೀಡಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT